ಸಾರಾಂಶ
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ಮತ್ತೆ ಜಟಾಪಟಿ ಶುರುವಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟಿಲ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದರೆ, ರಾಜೀನಾಮೆ ನೀಡದೆ ತನಿಖೆಗೆ ಸಹಕರಿಸುವುದಾಗಿ ಸಚಿವ ಶರಣ್ ತಿಳಿಸಿದ್ದಾರೆ.
ಸಚಿವ ಶರಣ್ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರ ರಾಜೀನಾಮೆ ಪಡೆಯಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೆಕ್ಕಾಧಿಕಾರಿ ಪರಶುರಾಮ್ ಅವರು ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಸಭೆ ಕುರಿತು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.ತಪ್ಪು ಮಾಡಿಲ್ಲ, ತನಿಖೆಗೆ ಸಿದ್ಧ: ಶರಣಪ್ರಕಾಶ್
ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಚುನಾವಣೆ ನೀತಿ ಸಂಹಿತೆ ವೇಳೆ ನಾನು ನನ್ನ ಕಚೇರಿಗೆ ಹೋಗಿಯೇ ಇಲ್ಲ. ಈ ಬಗ್ಗೆ ಯಾವುದೇ ತನಿಖೆಗೂ ನಾನು ಸಿದ್ಧ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಇಂತಹ ಆರೋಪವನ್ನು ನಾನು ಕನಸಿನಲ್ಲೂ ಊಹಿಸಿರಲಿಲ್ಲ. ನನ್ನ ಮೇಲಿನ ಸಾಕ್ಷ್ಯ ನಾಶ ಆರೋಪ ಅಪಹಾಸ್ಯ ಎಂದೇ ಹೇಳಬೇಕು. ನನ್ನ ಮೇಲಿನ ಆರೋಪದ ಬಗ್ಗೆ ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.