ಸಾರಾಂಶ
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾದರೂ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆಯೇ ಕಗ್ಗಂಟಾಗಿ ಪರಿಣಮಿಸಿದೆ. ದಿನಕ್ಕೊಬ್ಬರ ಹೆಸರು ಮುಂಚೂಣಿಗೆ ಬರುತ್ತಿದ್ದು, ಇನ್ನುಳಿದ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.
ನಾರಾಯಣ ಹೆಗಡೆ
ಕನ್ನಡಪ್ರಭ ವಾರ್ತೆ ಹಾವೇರಿಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾದರೂ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆಯೇ ಕಗ್ಗಂಟಾಗಿ ಪರಿಣಮಿಸಿದೆ. ದಿನಕ್ಕೊಬ್ಬರ ಹೆಸರು ಮುಂಚೂಣಿಗೆ ಬರುತ್ತಿದ್ದು, ಇನ್ನುಳಿದ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ.
ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆ ದಿನದಿಂದ ದಿನಕ್ಕೆ ತುರುಸು ಪಡೆಯುತ್ತಿದೆ. ಎರಡೂ ಪಕ್ಷಗಳು ಇನ್ನೂ ಅಭ್ಯರ್ಥಿ ಹೆಸರು ಘೋಷಣೆ ಮಾಡದ್ದರಿಂದ ಕಾರ್ಯಕರ್ತರಲ್ಲಿ ಕುತೂಹಲ ಹೆಚ್ಚಿಸಿದೆ. ಬಿಜೆಪಿಯಿಂದ ಯಾರಿಗೆ ಟಿಕೆಟ್ ಕೊಡುತ್ತಾರೆ ಎಂಬುದನ್ನು ಕಾಂಗ್ರೆಸ್ ನೋಡುತ್ತಿದ್ದರೆ, ಕಾಂಗ್ರೆಸ್ ನಡೆ ನೋಡಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಕಾಯುತ್ತಿದೆ. ಎರಡೂ ಪಕ್ಷಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕ್ಷೇತ್ರದಲ್ಲಿ ತಮ್ಮ ಹಿಡಿತ ಉಳಿಸಿಕೊಳ್ಳುವುದಕ್ಕಾಗಿ ಸೂಕ್ತ ಅಭ್ಯರ್ಥಿಯನ್ನು ಸೂಚಿಸುವುದು ಮುಖ್ಯವಾಗಿದೆ. ಮೊದಲು ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡಿಸುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಪುರಸ್ಕರಿಸುವ ಸಾಧ್ಯತೆ ಕಡಿಮೆ ಎಂದು ಗೊತ್ತಾಗುತ್ತಿದ್ದಂತೆ ಆಪ್ತ ಸಹಾಯಕರಾಗಿರುವ ಚನ್ನು ಪಾಟೀಲ್‌ಗೆ ಟಿಕೆಟ್ ಕೊಡಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಕಳೆದ ೩೦ ವರ್ಷಕ್ಕಿಂತಲೂ ಹೆಚ್ಚು ಕಾಲ ಬೊಮ್ಮಾಯಿ ಅವರ ಜತೆ ನಿಕಟ ಸಂಪರ್ಕ ಹೊಂದಿರುವ ಚೆನ್ನು ಪಾಟೀಲರು ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಹಿಡಿತ ಹೊಂದಿದ್ದಾರೆ. ಮುಖಂಡರು, ಕಾರ್ಯಕರ್ತರ ಅಂತರಂಗವನ್ನು ಬಲ್ಲವರಾಗಿದ್ದಾರೆ. ಆದ್ದರಿಂದ ಚೆನ್ನು ಪಾಟೀಲರಿಗೆ ಟಿಕೆಟ್ ಕೊಟ್ಟರೆ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರ ಬಿಜೆಪಿ ನಾಯಕರಲ್ಲಿದೆ ಎಂದು ಹೇಳಲಾಗುತ್ತಿದೆ. ಶ್ರೀಕಾಂತ ದುಂಡಿಗೌಡರ, ಶೋಭಾ ನಿಸ್ಸೀಮಗೌಡ್ರ ಸೇರಿದಂತೆ 57 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಕೆಲವರು ತಮ್ಮ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ, ಬಸವರಾಜ ಬೊಮ್ಮಾಯಿ ಸೂಚಿಸುವ ಅಭ್ಯರ್ಥಿಗೇ ಟಿಕೆಟ್ ಫೈನಲ್ ಆಗುವುದು ನಿಶ್ಚಿತ. ಕೆಲ ದಿನಗಳ ಹಿಂದಿನಿಂದ ಮಾಜಿ ಸಚಿವ ಮುರುಗೇಶ ನಿರಾಣಿ ಹೆಸರು ಮುಂಚೂಣಿಗೆ ಬಂದಿತ್ತು.ಕೈನಲ್ಲೂ ಗೊಂದಲ: ಇನ್ನು ಕಾಂಗ್ರೆಸ್‌ನಲ್ಲೂ ಟಿಕೆಟ್ ಹಂಚಿಕೆ ಸಂಬಂಧ ಭಾರೀ ಪೈಪೋಟಿ ನಡೆದಿದೆ. ಇಲ್ಲಿ ಅಭ್ಯರ್ಥಿಗಿಂತ ಹೆಚ್ಚಾಗಿ ಅಲ್ಪಸಂಖ್ಯಾತರಿಗೆ ಕೊಡಬೇಕೋ ಅಥವಾ ಲಿಂಗಾಯತರಿಗೋ ಎಂಬುದು ಮುನ್ನೆಲೆಗೆ ಬಂದಿದೆ. ಯಾರಿಗೆ ಟಿಕೆಟ್ ನೀಡಿದರೆ ಅನುಕೂಲ ಎಂಬ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಿದ್ದು, ಬಿಜೆಪಿ ಅಭ್ಯರ್ಥಿ ನೋಡಿ ತನ್ನ ಅಭ್ಯರ್ಥಿ ನಿಲ್ಲಿಸುವ ಬಗ್ಗೆ ಚಿಂತಿಸುತ್ತಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಟಿಕೆಟ್ ಆಕಾಂಕ್ಷಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್‌ಗೆ ರವಾನಿಸಲು ತೀರ್ಮಾನಿಸಿದ್ದು, ಬಹುತೇಕ ಅ.೨೩ರಂದು ಅಭ್ಯರ್ಥಿ ಘೋಷಣೆ ಸಾಧ್ಯತೆಯಿದೆ ಎನ್ನಲಾಗಿದೆ. ಕೈ ಟಿಕೆಟ್‌ಗಾಗಿ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ, ಯಾಸೀರ್‌ಖಾನ್ ಪಠಾಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಸಚಿವ ಆರ್. ಶಂಕರ್, ರಾಜೇಶ್ವರಿ ಪಾಟೀಲ, ರಾಜು ಕುನ್ನೂರ ಪ್ರಯತ್ನ ನಡೆಸಿದ್ದಾರೆ. ಇನ್ನು ಕ್ಷೇತ್ರದ ಹೊರಗಿನವರೂ ಕಣ್ಣಿಟ್ಟಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ ಆಕಾಂಕ್ಷಿಗಳಿಗೆ ಟಿಕೆಟ್ ಸಿಗುತ್ತೋ ಇಲ್ಲವೋ ಎಂಬ ಆತಂಕ ಶುರುವಾಗಿದೆ. ಇದರಿಂದ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಯೂ ಗರಿಗೆದರಿದೆ.