ಸಾರಾಂಶ
ಕನ್ನಡಪ್ರಭ ವಾರ್ತೆ ಕಾಪುಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಯಾವ ಕೆಲಸವನ್ನೂ ಕೀಳಾಗಿ ಕಾಣದೆ ಪೋಷಕರಿಗೆ ವಿಧೇಯರಾಗಿದ್ದುಕೊಂಡು ಸಾಧನಾ ಪಥದಲ್ಲಿ ಮುಂದುವರಿಯಲು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸಾಂದರ್ಭಿಕವಾಗಿ ಕವನಗಳ ಸಾಲುಗಳನ್ನು ಉದ್ಘರಿಸುತ್ತಾ ದೃಷ್ಟಾಂತಗಳ ಮೂಲಕ ವಿವರಿಸುತ್ತಾ ಅರ್ಥಪೂರ್ಣ ಸಂವಹನದ ಮೂಲಕ ಪರಸ್ಪರ ಸಹಕಾರದೊಡನೆ ಸಮಾಜದಲ್ಲಿ ಸಂಬಂಧವನ್ನು ಸಾಧಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.ಕಾರ್ಯಕ್ರಮದ ಇನ್ನೋರ್ವ ಅತಿಥಿ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ.ಭಾಸ್ಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರಸ್ತುತ ಜಗತ್ತಿನಲ್ಲಿ ನೈತಿಕ ಮೌಲ್ಯಗಳು ಹಾಗೂ ಉನ್ನತ ಆಚಾರ-ವಿಚಾರಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಮಿಥುನ್ ಚಕ್ರವರ್ತಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಸೋನಾ ಎಚ್.ಸಿ. ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ದಿವ್ಯಾ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷ ಸುಜಲ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಸ್ವರೂಪ್ ಶೆಟ್ಟಿ ವಂದಿಸಿದರು.