ಶಿವ ಶರಣರು, ವಚನಕಾರರು ಸಮಾಜದ ಆಸ್ತಿ : ತಿಪ್ಪೇರುದ್ರಪ್ಪ

| Published : Feb 02 2024, 01:02 AM IST

ಸಾರಾಂಶ

ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಮಾತನಾಡಿದ ಸಾಹಿತಿ ಬಿ. ತಿಪ್ಪೇರುದ್ರಪ್ಪ ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜೊತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದ್ದು ಎಂದು ಹೇಳಿದರು.

- ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಮಡಿವಾಳ ಮಾಚಿದೇವ ಜಯಂತಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜೊತೆಗೆ ಜ್ಞಾನ ವಿಸ್ತರಣೆಗೆ ಅವರು ನೀಡಿದ ಕೊಡುಗೆ ಮಹತ್ತರವಾದುದ್ದು ಎಂದು ಸಾಹಿತಿ ಬಿ. ತಿಪ್ಪೇರುದ್ರಪ್ಪ ಹೇಳಿದರು. ಜಿಲ್ಲಾಡಳಿತದದಿಂದ ಗುರುವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ ಇಂತಹ ಶರಣರು, ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶಗಳು ಇಂದಿನ ಸಮಾಜಕ್ಕೂ ಪ್ರೇರಣೆಯಾಗಿದ್ದು, ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆಯಬೇಕು ಎಂದರು. ಮಡಿವಾಳ ಮಾಚಿದೇವರು ಬದುಕಿಗೆ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಮಹತ್ವವಾದುದು, ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ ಮಡಿ ಹಾಸಿ ಸ್ವಾಗತಿಸುವ ಕೆಲಸ ಅವರದ್ದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿ ನಿಂದ ಬರುವವರಿಗೆ ಸಿಗುತ್ತಿರಲಿಲ್ಲ ಎಂದ ಅವರು, ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಮಾಚಿದೇವರು ಹೊತ್ತ ಜವಾಬ್ದಾರಿ ಮಹತ್ತರವಾದದ್ದು, ಶರಣ ಧರ್ಮ ರಕ್ಷಣೆ, ವಚನ ಸಾಹಿತ್ಯದ ದಂಡ ನಾಯಕತ್ವ ಜವಾಬ್ದಾರಿ ಹೊತ್ತು ಬಸವಣ್ಣ, ಅಕ್ಕ ನಾಗಮ್ಮ, ಕಿನ್ನರಿ ಬೊಮ್ಮಣ ಮೊದಲಾದವರೊಂದಿಗೆ ಮಾಚಿದೇವ ಶರಣ ಸಮೂಹದ ಭೀಮ ರಕ್ಷೆಯಾಗಿ ನಿಂತರು ಎಂದು ಹೇಳಿದರು. ಚಿಕ್ಕಮಗಳೂರು ತಹಸೀಲ್ದಾರ್ ಡಾ. ಸುಮಂತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಮ್ಮ ಕಾಯಕದ ಮೂಲಕ ಸಮಾಜದಲ್ಲಿರುವ ಅಧರ್ಮ, ಅಸಂಸ್ಕೃತಿ ಕೊಳಕನ್ನು ಹೋಗಲಾಡಿಸಿದ ಕಾಯಕ ಯೋಗಿ ಮಡಿವಾಳ ಮಾಚಿದೇವರ ಆದರ್ಶಗಳು ಇಂದಿನ ಸಮಾಜದ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿವೆ ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಮೇಶ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿ ಡೆಪ್ಯುಟಿ ತಹಸೀಲ್ದಾರ್ ಶಾರದ, ರಾಜ್ಯ ಮಡಿವಾಳ ಸಂಘದ ಕಾರ್ಯದರ್ಶಿ ರಾಮಚಂದ್ರ, ಮಡಿವಾಳ ಸಂಘದ ಚಿಕ್ಕಮಗಳೂರು ಶಾಖೆ ಅಧ್ಯಕ್ಷ ಕೆ.ಎಂ. ಬಸವರಾಜು, ಉಪಾಧ್ಯಕ್ಷ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಪೋಟೋ ಫೈಲ್‌ ನೇಮ್‌ 1 ಕೆಸಿಕೆಎಂ 1ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ತಹಸೀಲ್ದಾರ್‌ ಡಾ. ಸುಮಂತ್‌ ಉದ್ಘಾಟಿಸಿದರು.