ಬೆಳಗುಂಬ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಿವಕುಮಾರಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಳೆಯ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಆದ್ಯತೆಯಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ರೈತರಿಗೆ ಬೆಳೆ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಸಂಘಕ್ಕೆ ಹೆಚ್ಚಿನ ಷೇರುದಾರರನ್ನು ಸೇರ್ಪಡೆಗೊಳಿಸಿ, ರೈತರಿಗೆ ಅಗತ್ಯ ಸಹಕಾರ ಒದಗಿಸುವ ಮೂಲಕ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ರೈತರ ಹಿತಾಸಕ್ತಿ ಕಾಪಾಡುವ ಜೊತೆಗೆ ಸಹಕಾರ ಸಂಘದ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದೊಂದಿಗೆ ತಾಲೂಕಿನ ಬೆಳಗುಂಬ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಿವಕುಮಾರಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 11 ನಿರ್ದೇಶಕರ ಪೈಕಿ ಶಿವಕುಮಾರಸ್ವಾಮಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ದೇವರಾಜ್ ತಿಳಿಸಿದರು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಶಿವಕುಮಾರಸ್ವಾಮಿ, ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ದೇಶಕರು, ಗ್ರಾಮದ ಹಿರಿಯರು ಹಾಗೂ ಮುಖಂಡರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಎಲ್ಲರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ತಮ್ಮ ಆಯ್ಕೆಗೆ ಸಹಕರಿಸಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಅವರಿಗೂ ಅಭಿನಂದನೆ ಸಲ್ಲಿಸಿದರು.

ಪ್ರಸ್ತುತ ಮಳೆಯ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಆದ್ಯತೆಯಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ರೈತರಿಗೆ ಬೆಳೆ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಸಂಘಕ್ಕೆ ಹೆಚ್ಚಿನ ಷೇರುದಾರರನ್ನು ಸೇರ್ಪಡೆಗೊಳಿಸಿ, ರೈತರಿಗೆ ಅಗತ್ಯ ಸಹಕಾರ ಒದಗಿಸುವ ಮೂಲಕ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್‌ ಗಂಜಿಗೆರೆ, ಅಡವಿಸ್ವಾಮಿ, ಉಮೇಶ್ ಕಾಟಿಕೆರೆ, ಪುಟ್ಟಮಲ್ಲೇಗೌಡ ಬಾಬು, ಬೆಳಗುಂಬ ಜಯಣ್ಣ, ತೋಂಟರಾಧ್ಯ, ರವೀಂದ್ರನಾಥ್, ಕೋಡಿಹಳ್ಳಿ ರಘು, ಸಂಘದ ನೂತನ ನಿರ್ದೇಶಕರು, ಬೆಳಗುಂಬ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಮುಖಂಡರು ಉಪಸ್ಥಿತರಿದ್ದರು.