ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಮತದಾರರ ಆಶಯದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಅರಸೀಕೆರೆ ಕ್ಷೇತ್ರದ ಕೆ ಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರೆಯುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಎ ಗೋಪಾಲಸ್ವಾಮಿ ಸಂತಸ ವ್ಯಕ್ತಪಡಿಸಿದರು.ಈ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಕನಸು ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರ ಸರ್ಕಾರದಲ್ಲಿ ಕೆ ಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ದೊರಕುವ ಮೂಲಕ ದಶಕದ ಕನಸು ಈಡೇರಿದೆ ಮುಂಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಯ ಜೊತೆಗೆ ಕಾಂಗ್ರೆಸ್ ಸಂಘಟನೆಗೂ ಆನೆ ಬಲ ಬಂದಂತಾಗಿದೆ ಎಂದರು. ಜಿಲ್ಲೆಯ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಹಾಗೂ ನಾನು ಮತ್ತು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರಿಗೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕೆಎಂ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಲಾಗಿತ್ತು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ 2028ನೇ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಹೆಚ್ಚು ಸಹಕಾರಿಯಾಗಲಿದೆ.4 ಬಾರಿ ಶಾಸಕರಾಗಿ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜನಮನ್ನಣೆ ಪಡೆದಿರುವ ಶಿವಲಿಂಗೇಗೌಡರು ನೀರಾವರಿ ಯೋಜನೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದರೂ ಈ ಕಾರಣದಿಂದಲೇ ಅವರು ಸತತ ಗೆಲುವು ಸಾಧಿಸಲು ಸಾಧ್ಯವಾಗಿದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅವರಿಗೆ ಅವಕಾಶ ಕಲ್ಪಿಸಿರುವುದು ಸಮಗ್ರ ಅಭಿವೃದ್ಧಿಯ ಪೂರಕವಾಗಿದೆ ಅವರ ಕಾರ್ಯದಕ್ಷತೆಗೆ ಉತ್ತಮ ಖಾತೆ ನೀಡಿದರೆ ನಿಭಾಯಿಸುವ ಶಕ್ತಿ ಅವರಲ್ಲಿದೆ ಈ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.====ಫೋಟೊ: ಗೋಪಾಲಸ್ವಾಮಿ