ಸಾರಾಂಶ
ರಾಜ್ಯದಲ್ಲಿ ಆ.27 ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಆ.27 ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಇನ್ನೂ ಒಂದೆರಡು ದಿನ ಬಹುತೇಕ ಸ್ಥಳದಲ್ಲಿ ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆ.27 ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದ ಮಳೆಯಾಗುವ ಲಕ್ಷಣ ಇದೆ. ಗಾಳಿಯು ಗಂಟೆಗೆ 40 ಕಿ.ಮೀ. ವೇಗದಲ್ಲಿ ಬೀಸುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆ.28 ರಿಂದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಶುರುವಾಗಲಿದೆ. ಹೀಗಾಗಿ, ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ. ಆ.24ಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ಚಾಮರಾಜನಗರದ ಮಲ್ಲೆಮಹದೇಶ್ವರ ಬೆಟ್ಟ, ಕ್ಯಾಸಲ್ ರಾಕ್‌ನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಮಂಕಿ, ಲೋಂಡಾ, ಗೇರಸೊಪ್ಪ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಅಂಕೋಲಾದಲ್ಲಿ ತಲಾ 1 ಸೆಂ.ಮೀ. ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.