ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸರ್ಕಾರ ಹಾಗೂ ಬಿಡಿಎ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಮತ್ತು ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯ್ಕ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸರ್ಕಾರದ ಪರ ರಾಜ್ಯ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಅನುಮತಿ ನೀಡಬೇಕು. ಬಡಾವಣೆ ಅಭಿವೃದ್ಧಿ ಕಾಮಗಾರಿಗಾಗಿ 1,100 ಕೋಟಿ ರು.ಸಾಲ ಪಡೆದು ಬಡ್ಡಿ ಕಟ್ಟಲಾಗುತ್ತಿದೆ. ಬಡಾವಣೆ ಕಾಮಗಾರಿ ಅಂತಿಮ ಹಂತದಲ್ಲಿದೆ. ನಿವೇಶನ ಹಂಚಿಕೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಹಾಗಾಗಿ, ಅರ್ಜಿ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.ಅದಕ್ಕೆ ಒಪ್ಪಿದ ಪೀಠ, ದುಬಾರಿ ಅರ್ಜಿ ಶುಲ್ಕ ವಿಧಿಸದಂತೆ ಸರ್ಕಾರಕ್ಕೆ ಸಲಹೆ ನೀಡಿ ಅರ್ಜಿ ಸ್ವೀಕರಿಸಲು ಅನುಮತಿ ನೀಡಿತು. ಇದೇ ವೇಳೆ ಅರ್ಜಿ ಸ್ವೀಕರಿಸಿದರೂ ನಿವೇಶನ ಹಂಚಿಕೆಗೆ ಈ ಹಿಂದೆ ನೀಡಲಾಗಿರುವ ನಿರ್ಬಂಧವನ್ನು ಇದೇ ವೇಳೆ ಮುಂದುವರಿಸಿತು.
ಈ ಹಿಂದೆಯೂ ಬಿಡಿಎ ಎರಡು ಬಾರಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಆದರೆ, ನ್ಯಾಯಾಲಯ ಅನುಮತಿ ನೀಡಿರಲಿಲ್ಲ. ಬದಲಿಗೆ ಬಡಾವಣೆ ಅಭಿವೃದ್ಧಿ ವಿಧಿ ವಿಧಾನಗಳ ಬಗ್ಗೆ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿತ್ತು. ನಿವೇಶನ ಹಂಚಿಕೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ 2024ರಲ್ಲಿ ಮಧ್ಯಂತರ ಅದೇಶ ನೀಡಿತ್ತು.