ಮಂಜುನಾಥ ಕೆ.ಎಂ.
ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಪದವಿ ಪೂರ್ವ ಕಾಲೇಜುಗಳ ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳಲಿದೆ. ಆದರೆ, ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಉಪನ್ಯಾಸಕರ ಕೊರತೆಯೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಅಗತ್ಯ ಸಂಖ್ಯೆಯ ಉಪನ್ಯಾಸಕರಿಲ್ಲ. ವಿಶೇಷವಾಗಿ ಗಣಿತ, ಕನ್ನಡ, ಇಂಗ್ಲೀಷ್, ಜೀವಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ಬೋಧಿಸುವ ಉಪನ್ಯಾಸಕರ ಅಭಾವ ಹೆಚ್ಚಾಗಿದೆ. ಹೀಗಾಗಿ ಹಲವು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನೇ ಆಶ್ರಯಿಸುವಂತಾಗಿದೆ. ಆದರೆ, ಅತಿಥಿ ಉಪನ್ಯಾಸಕರ ನೇಮಕಾತಿಯೂ ಸಮಯಕ್ಕೆ ಸರಿಯಾಗಿ ನಡೆಯದ ಕಾರಣ ಶೈಕ್ಷಣಿಕ ಚಟುವಟಿಕೆ ಆರಂಭದಲ್ಲೇ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ.
ಉಪನ್ಯಾಸಕರ ಕೊರತೆ:ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 179 ಉಪನ್ಯಾಸಕರ ಕೊರತೆಯಿದೆ. ಬಳ್ಳಾರಿ ಜಿಲ್ಲೆಯಲ್ಲಿ 21 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿವೆ. ಈ ಪೈಕಿ 95 ಉಪನ್ಯಾಸಕರು ಹಾಗೂ 8 ಪ್ರಾಚಾರ್ಯರ ಕೊರತೆಯಿದೆ. ವಿಜಯನಗರ ಜಿಲ್ಲೆಯಲ್ಲಿ 28 ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪೈಕಿ 84 ಉಪನ್ಯಾಸಕರು ಹಾಗೂ 15 ಪ್ರಾಚಾರ್ಯರ ಅಭಾವವಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಪದವಿ ಪೂರ್ವ ಶಿಕ್ಷಣ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಕಾಲೇಜುಗಳನ್ನು ಆರಂಭಿಸಿತಾದರೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಲಿಲ್ಲ. ಗ್ರಾಮೀಣ ಭಾಗದಲ್ಲಿರುವ ಕಾಲೇಜುಗಳಲ್ಲಿ ಉಪನ್ಯಾಸಕರ ಅಭಾವ ಹೆಚ್ಚಳದಿಂದಾಗಿ ವಿದ್ಯಾರ್ಥಿಗಳು ಸ್ಥಳೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ನಗರದ ಖಾಸಗಿ ಕಾಲೇಜು ಸೇರಲು ಆಸಕ್ತಿ ತೋರಿಸುತ್ತಿದ್ದಾರೆ.
ಸರ್ಕಾರಿ ಕಾಲೇಜು ಅನುಕೂಲಕರ:
ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಳಿಕ ಸಾವಿರಾರು ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣಕ್ಕೆ ಸೇರ್ಪಡೆಯಾಗುತ್ತಾರೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಕಾಲೇಜುಗಳೇ ಪ್ರಮುಖ ಆಶ್ರಯ. ಕಡಿಮೆ ಶುಲ್ಕ, ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಸೌಲಭ್ಯಗಳಿಂದಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಆದರೆ, ಉಪನ್ಯಾಸಕರ ಕೊರತೆಯಿಂದ ಗುಣಮಟ್ಟದ ಶಿಕ್ಷಣ ಸಿಗುವುದಿಲ್ಲ ಎಂಬ ಆತಂಕ ಪೋಷಕರದ್ದು.
ಮುನ್ಸಿಪಲ್ ಕಾಲೇಜಲ್ಲಿ..:ನಗರದ ಸರ್ಕಾರಿ ಮುನ್ಸಿಪಲ್ ಕಾಲೇಜಿನಲ್ಲಿ ಬರೋಬ್ಬರಿ 20 ಉಪನ್ಯಾಸಕರ ಕೊರತೆಯಿದೆ. ಕನ್ನಡ ಬೋಧಕರು 4, ಇಂಗ್ಲೀಷ್ 5, ಅರ್ಥಶಾಸ್ತ್ರ 2 ಸೇರಿದಂತೆ ವಿವಿಧ ವಿಷಯಗಳ ಬೋಧಕರ ಅಭಾವವಿದೆ. ಪ್ರತಿವರ್ಷ ಈ ಕಾಲೇಜಿನಲ್ಲಿ ಪ್ರವೇಶಾತಿ ಸಂಖ್ಯೆ ಕುಸಿಯುತ್ತಿದೆ. ಒಂದು ಕಾಲದಲ್ಲಿ ಈ ಕಾಲೇಜಿನಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಮುಗಿಬೀಳುತ್ತಿದ್ದರು. ಪ್ರವೇಶಾತಿ ದಿನ ವಿದ್ಯಾರ್ಥಿಗಳನ್ನು ನಿಯಂತ್ರಿಸುವುದೇ ಕಷ್ಟವಾಗುತ್ತಿತ್ತು. ಆದರೆ, ಈ ಕಾಲೇಜಿನಲ್ಲಿ ಬೋಧಕರ ಸಂಖ್ಯೆ ಕುಸಿಯುತ್ತಿದ್ದಂತೆಯೇ ಗುಣಮಟ್ಟವೂ ಕುಸಿಯುತ್ತಿದೆ. ಇದರಿಂದ ಇಲ್ಲಿ ಪ್ರವೇಶ ಪಡೆಯುವವರ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ವಿಜಯನಗರ ಜಿಲ್ಲೆಯ ಉತ್ತಂಗಿ, ಹಲವಾಗಲು, ಗುಡೇಕೋಟೆ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಹೆಚ್ಚಿದೆ.
ಖಾಸಗಿ ಸಂಸ್ಥೆಗಳಿಗೆ ಅನುಕೂಲ:ಅಖಂಡ ಜಿಲ್ಲೆಯಲ್ಲಿ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಸೇರಿದಂತೆ ಮೂಲ ಸೌಕರ್ಯಗಳ ಅಭಾವದಿಂದ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿರುವುದು ಖಾಸಗಿ ಕಾಲೇಜುಗಳಿಗೆ ವರವಾಗಿ ಪರಿಣಮಿಸಿದೆ. ಖಾಸಗಿ ಕಾಲೇಜುಗಳಿಗೆ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ಬರುತ್ತಿರುವುದರಿಂದ ಡೊನೇಷನ್ ನಿಯಂತ್ರಣ ಮಿತಿ ಮೀರಲಿದೆ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ 49 ಮಾತ್ರ ಸರ್ಕಾರಿ ಪಿಯು ಕಾಲೇಜುಗಳು ಇದ್ದು, ಖಾಸಗಿ ಕಾಲೇಜುಗಳು 102, ಅನುದಾನಿತ 23 ಕಾಲೇಜುಗಳಿವೆ.