ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ರಸ್ತೆಗಳ ಗುಂಡಿಗಳನ್ನು ಮುಚ್ಚಿ, ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸಿಪಿಐಎಂ ವತಿಯಿಂದ ಸೋಮವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ರಸ್ತೆಗಳ ಗುಂಡಿಗಳನ್ನು ಮುಚ್ಚಿ, ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸಿಪಿಐಎಂ ವತಿಯಿಂದ ಸೋಮವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಮುಖಂಡ ಎನ್.ಡಿ. ಕುಟ್ಟಪ್ಪನ್, ಕಳೆದ ಐದು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಆಡಳಿತ ಮಂಡಳಿಗಳು ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು. ಗುಹ್ಯ, ಕೂಡುಗದ್ದೆ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆಗಳು ಗುಂಡಿಮಯವಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಿಪಿಐಎಂ ಮುಖಂಡ ಎಚ್.ಬಿ. ರಮೇಶ್ ಮಾತನಾಡಿ, ರಸ್ತೆಗಳ ದುಸ್ಥಿತಿಯ ಬಗ್ಗೆ ವಾಹನ ಚಾಲಕರ ಸಂಘಟನೆಗಳು ಮೌನ ವಹಿಸಿರುವುದು ಸರಿಯಲ್ಲ. ಆಟೋ ದರ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಿದ್ದು, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಘಟನೆಗಳು ಧ್ವನಿ ಎತ್ತಬೇಕು ಎಂದರು. ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚದಿದ್ದಲ್ಲಿ ಸಾರ್ವಜನಿಕರನ್ನು ಒಗ್ಗೂಡಿಸಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ಪ್ರತಿಭಟನೆಗೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಲಾಯಿತು. ಬಳಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅನಿಲ್ ಕುಟ್ಟಪ್ಪ, ಎಸ್. ಬೈಜು, ಪಿ.ಯು. ಮುಸ್ತಫ, ಕರ್ಪಸ್ವಾಮಿ, ಸಿ.ಪಿ. ಮೊಯ್ದು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.