ಸಾರಾಂಶ
ರಾಜ್ಯ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೇಟ್ ಸರ್ಕಾರ ಎಂದು ಪ್ರೂವ್ ಆಗುತ್ತಿದೆ.
ಪಿಕ್ ಪಾಕೇಟ್ ಸರ್ಕಾರ ಎಂದು ಪ್ರೂವ್ । ಅಕ್ರಮ ಚಟುವಟಿಕೆಯಲ್ಲಿ ಸಚಿವ ತಂಗಡಗಿ ಕುಟುಂಬ ಭಾಗಿ- ಆರೋಪ
ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಳಕನ್ನಡಪ್ರಭ ವಾರ್ತೆ ಕೊಪ್ಪಳ
ರಾಜ್ಯ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೇಟ್ ಸರ್ಕಾರ ಎಂದು ಪ್ರೂವ್ ಆಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯಲು ನಾಲಾಯಕ್ ಎಂದು ಈಗಾಗಲೇ ಸಾಬೀತು ಮಾಡಿದ್ದಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳ ನೆಪದಲ್ಲಿ ಸುಳ್ಳುಗಳ ಭರವಸೆ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇನ್ನೊಂದು ಕಡೆ ಬಡವರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ಮೂಲಕ ಇದೊಂದು ಪಿಕ್ ಪಾಕೇಟ್ ಸರ್ಕಾರ ಎಂದು ಸಿದ್ದರಾಮಯ್ಯ ಪ್ರೂವ್ ಮಾಡಿದ್ದಾರೆ. ಇಂತಹ ಸರ್ಕಾರವನ್ನು ಶೀಘ್ರವೇ ಕೆಳಗಿಳಿಸುವ ಪ್ರಯತ್ನ ಜನರಿಂದ ಆಗಿಯೇ ಆಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅದರಲ್ಲೂ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ನಾನೂ ಸಹ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೂ ತಂದಿದ್ದೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕುಟುಂಬ ನೇರವಾಗಿ ತೊಡಗಿಸಿಕೊಂಡಿದೆ. ಹೀಗಾಗಿ ಜಿಲ್ಲಾಡಳಿತ ಈ ಬಗ್ಗೆ ಏನೂ ಮಾಡಲು ಆಗದೆ ನಿಸ್ಸಾಹಾಯಕವಾಗಿದೆ. ಈ ಬಗ್ಗೆ ಮುಂದೆ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.ರಾಜ್ಯದ ಜನರೇ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸುತ್ತಾರೆ. ಕಾಂಗ್ರೆಸ್ ಶಾಸಕರು ಬೇಸತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಆರೋಪಿಸಿದರು.