ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ

| Published : Mar 31 2024, 02:08 AM IST

ಸಾರಾಂಶ

ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಶ್ರೀಕ್ಷೇತ್ರ ಯಲ್ಲಮ್ಮಾ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದರ್ಶನ ಪಡೆದ ಅವರು, ನಂತರ ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ನಿವಾಸಕ್ಕೆ ತೆರಳಿ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದಿಂದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್ ದಿನದಿಂದ ದಿನಕ್ಕೆ ದೇಶದಲ್ಲಿ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು, ಎದುರಾಳಿ ಪಕ್ಷದ ಅಭ್ಯರ್ಥಿ ಬಗ್ಗೆ ನಾನು ಯಾವುದೇ ಚರ್ಚೆ ಮಾಡಲು ಬಯಸುವುದಿಲ್ಲ. ಸವದತ್ತಿ ಮತ ಕ್ಷೇತ್ರದಲ್ಲಿ ಮಾಮನಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಸವದತ್ತಿಯಲ್ಲಿ ಬಿಜೆಪಿ ಪಕ್ಷ ಸಂಘಟಿಸುವಲ್ಲಿ ಅವರ ಪಾತ್ರ ಹೆಚ್ಚಿದೆ. ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಈಗಾಗಲೇ ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ಸೌರವ ಚೋಪ್ರಾ ಅವರ ಮನೆಗೂ ಭೇಟಿ ನೀಡಿದ್ದ ಜಗದೀಶ ಶೆಟ್ಟರ ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸೋಣ ಎಂದು ಕೋರಿದರು.

ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ, ಸಂಜಯ ಪಾಟೀಲ, ಮಹಾಂತೇಶ ಕವಟಗಿಮಠ, ಸುಭಾಸಗೌಡ ಪಾಟೀಲ, ಈರಣ್ಣ ಚಂದರಗಿ, ಮಹೇಂದ್ರ ಸಿಂಘಿ, ಜಗದೀಶ ಶಿಂತ್ರಿ, ರತ್ನಾ ಮಾಮನಿ, ಬಸಯ್ಯಸ್ವಾಮಿ ಹಿರೇಮಠ, ಜಗದೀಶ ಕೌಜಗೇರಿ, ಕುಮಾರ ಜಕಾತಿ, ನವೀನ ಸೋಮನ್ನವರ, ಡಾ.ನಯನಾ ಭಸ್ಮೆ, ರಾಮಾಚಾರಿ ಲಮಾಣಿ, ರಾಜು ಸಾಲಿಮಠ, ಎಂ.ಎಂ.ಬಿದರಗಡ್ಡಿ, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಫಕ್ಕೀರಗೌಡ ದೊಡ್ಡಗೌಡರ ಇತರರು ಉಪಸ್ಥಿತರಿದ್ದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಜೊತೆಗೆ ರಾಜ್ಯದಲ್ಲಿ ಎಲ್ಲ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಎಲ್ಲ ಧುರೀಣರೊಂದಿಗೆ ಚರ್ಚೆ ನಡೆಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು. ಜೆಡಿಎಸ್ ಪಕ್ಷ ತನ್ನದೆ ಆದ ಶಕ್ತಿ ಹೊಂದಿದ್ದು, ಜೆಡಿಎಸ್ ಕಾರ್ಯಕರ್ತರ ಪಡೆಯನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಜಯಸಾಧಿಸುವ ಗುರಿ ಹೊಂದಲಾಗಿದೆ.

-ಜಗದೀಶ ಶೆಟ್ಟರ,

ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ.