ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದು ಭಾಷಣ ಮಾಡುವ ಎಲ್ಲಾ ಶಾಸಕರು ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಆ ಭಾಗದ ಸಮಗ್ರ ಅಭಿವೃದ್ಧಿಗೆ ಬೇಕಾದ ಯಾವ ಕೆಲಸಗಳನ್ನೂ ಮಾಡುತ್ತಿಲ್ಲ.

ಕನ್ನಡಪ್ರಭ ವಾರ್ತೆ ರಾಮನಗರ

ಬೆಳಗಾವಿ ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ, ವಿರುದ್ಧ ಡಿನ್ನರ್ ಮೀಟಿಂಗ್‌ಗಳಿಗೆ ಸೀಮಿತವಾಗಿದೆ. ಉತ್ತರ ಕರ್ನಾಟಕ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ವಿಫಲವಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜು ಕಿಡಿಕಾರಿದರು.

ನಗರದ ಐಜೂರು ವೃತ್ತದಲ್ಲಿ ಗುರುವಾರ ಪಕ್ಷದ ಕನ್ನಡ ವಾಟಾಳ್ ಪಕ್ಷ ಹಾಗೂ ಕರುನಾಡುಸೇನೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದು ಭಾಷಣ ಮಾಡುವ ಎಲ್ಲಾ ಶಾಸಕರು ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಆ ಭಾಗದ ಸಮಗ್ರ ಅಭಿವೃದ್ಧಿಗೆ ಬೇಕಾದ ಯಾವ ಕೆಲಸಗಳನ್ನೂ ಮಾಡುತ್ತಿಲ್ಲ. ವಿರೋಧ ಪಕ್ಷಗಳಿಗೂ ಇದರ ಬಗ್ಗೆ ಇಚ್ಛಾಶಕ್ತಿ ಇಲ್ಲದಂತಾಗಿದೆ ಎಂದು ಟೀಕಿಸಿದರು.

ಅಧಿವೇಶನದ ಆರಂಭದಲ್ಲಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒಂದು ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಬೇಕಿತ್ತು. ನೀರಾವರಿ, ಶಿಕ್ಷಣ, ಮೂಲಸೌಕರ್ಯ, ಸಾರಿಗೆ, ಗಡಿ ವಿವಾದ ಸೇರಿದಂತೆ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ಆಗಬೇಕಿತ್ತು. ಚರ್ಚೆಯ ನಂತರ ನಿಗದಿತ ಕಾಲಮಿತಿಯಲ್ಲಿ ಅನುದಾನ ಬಿಡುಗಡೆ ಸೇರಿದಂತೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಆದರೆ ಇದ್ಯಾವುದೂ ನಡೆದಿಲ್ಲ. ಅಧಿವೇಶನ ಸಂಪೂರ್ಣ ವಿಫಲವಾಗಿದೆ ಎಂದರು.

ಸಿದ್ದರಾಮಯ್ಯ ಅವರು ದ್ವೇಷ ಭಾಷಣ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಾಟಾಳ್ ನಾಗರಾಜ್ ಹೇಳಿದರು.

ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ರಾಜ್ಯ ಉಸ್ತುವಾರಿ ಗಂಗಾಧರ್ ವಿ.ಎನ್, ಜಿಲ್ಲ್ಯಾಧ್ಯಕ್ಷ ಸಿ.ಎಸ್ ಜಯಕುಮಾರ್, ಪದಾಧಿಕಾರಿಗಳಾದ ಕರುನಾಡು ಸೇನೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ, ಭಾಗ್ಯಸುಧಾ, ನೂರಿನ್ ತಾಜ್, ಜಯರಾಮು, ವಿಜಯಕುಮಾರ್, ಕುಮಾರ್, ಪ್ರಸನ್ನ, ಶಿವಮೂರ್ತಿ, ಕೆಂಪರಾಜು , ಹೇಮಂತ್, ಗಿರೀಶ್ ಗೌಡ, ವಾಟಾಳ್ ಪಕ್ಷದ ಮುಖಂಡರಾದ ಪಾರ್ಥಸಾರಥಿ ಮತ್ತಿತರರು ಭಾಗವಹಿಸಿದ್ದರು.

------

18ಕೆಆರ್ ಎಂಎನ್ 7.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.