15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ:ಮೋದಿ, ಶಾ ಭೇಟಿಗೆ ಯತ್ನ

| Published : Nov 11 2025, 02:00 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ಶನಿವಾರ ಹಿರಿಯ ನಾಯಕ ಕಪಿಲ್‌ ಸಿಬಲ್‌ ಅವರ ‘ದಿಲ್‌ ಸೆ ಕಪಿಲ್‌ ಸಿಬಲ್‌’ ಪಾಡ್‌ಕ್ಯಾಸ್ಟ್‌ನಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ಶನಿವಾರ ಹಿರಿಯ ನಾಯಕ ಕಪಿಲ್‌ ಸಿಬಲ್‌ ಅವರ ‘ದಿಲ್‌ ಸೆ ಕಪಿಲ್‌ ಸಿಬಲ್‌’ ಪಾಡ್‌ಕ್ಯಾಸ್ಟ್‌ನಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ.

ಈ ವೇಳೆ ಭಾನುವಾರ ದೆಹಲಿಯಲ್ಲೇ ಉಳಿದುಕೊಂಡು ನ.17 ರಂದು ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದಾರೆ. ಕಬ್ಬು ಬೆಳೆ ನಿಗದಿ, ಸಕ್ಕರೆ ಎಂಎಸ್‌ಪಿ ದರ ಹೆಚ್ಚಳ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಕೇಳಿದ್ದಾರೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ವಿವಿಧ ಸಚಿವರನ್ನು ಭೇಟಿ ಮಾಡಲು ಉದ್ದೇಶಿಸಿದ್ದಾರೆ.

ಒಂದು ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರ ಭೇಟಿಗೆ ಅವಕಾಶ ಸಿಗದಿದ್ದರೆ ಭಾನುವಾರವೇ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಪ್ರತಿ ಬಾರಿ ದೆಹಲಿಗೆ ತೆರಳಲಿದಾಗಲೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಪಕ್ಷದ ವಿಚಾರ ಚರ್ಚೆ ನಡೆಸುತ್ತಾರೆ. ಅದೇ ರೀತಿ ಈ ಬಾರಿಯೂ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದೇ ವೇಳೆ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು 14ರ ವೇಳೆಗೆ ಭಾರತಕ್ಕೆ ಹಿಂತಿರುಗುವ ಸಾಧ್ಯತೆಯಿದ್ದು, ಒಂದು ವೇಳೆ ಅವರು ಹಿಂತಿರುಗಿದರೆ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.