ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹಾಗೂ ಜಿಲ್ಲಾಧ್ಯಕ್ಷ ಬಿ.ಜೆ. ವಿಜಯಕುಮಾರ್ ಇಲ್ಲಿನ ಲೋಕಾಯುಕ್ತ ಎಸ್ಪಿ ಅವರಿಗೆ ದೂರು ಸಲ್ಲಿಸಿದ್ದಾರೆ.ಮುಡಾ ಪ್ರಕರಣದ ಬಗ್ಗೆ ಡಿ.24 ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದರೂ ಸ್ನೇಹಿಮಯಿ ಕೃಷ್ಣ ಪ್ರತಿನಿತ್ಯ ಲೋಕಾಯುಕ್ತ ಕಚೇರಿ ಎದುರು ಮಾದ್ಯಮಗೋಷ್ಠಿ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುತ್ತಾರೆ. ಅಲ್ಲದೇ ಲೋಕಾಯುಕ್ತ ಎಸ್ಪಿ ಹಾಗೂ ಸಿಬ್ಬಂದಿ ವರ್ಗದವರ ವಿರುದ್ಧ ಕೂಡ ಆರೋಪ ಮಾಡುತ್ತಾ ಬೆದರಿಸುತ್ತಿದ್ದಾರೆ ಎಂದಿದ್ದಾರೆ.ತನಿಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿದ್ದು ಅವರನ್ನು ಹಾಗೂ ನನ್ನನ್ನು ಬಂಧಿಸುವಂತೆ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. ಅಲ್ಲದೇ ಲೋಕಾಯುಕ್ತ ಪೊಲೀಸರು ಈ ರೀತಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳುತ್ತಿದ್ದಾರೆ ಆ ಮೂಲಕ ತನಿಖಾಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆ. ಇವರ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿದ್ದಾರೆ ಎಂದು ಲಕ್ಷ್ಮಣ ಆರೋಪಿಸಿದ್ದಾರೆ.ಮುಡಾದ ಕೆಲವು ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ ನ್ಯಾಯಯುತ ತನಿಖೆಯಾಗಬೇಕಾದರೆ ಸ್ನೇಹಿಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಅವರು ಆಗ್ರಹಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ. ವಿಜಯಕಮಾರ್, ಕೆ. ಮಹೇಶ್ ಇದ್ದರು.