ಸಾರಾಂಶ
ಕನ್ನಡಪ್ರಭ ವಾರ್ತೆ ಹಾವೇರಿ
ನೊಳಂಬ ಲಿಂಗಾಯತ ಸಂಘದಿಂದ ಗುರು ಶಿವಯೋಗಿ ಸಿದ್ಧರಾಮೇಶ್ವರರ 851ನೇ ಜಯಂತಿ ಮಹೋತ್ಸವವನ್ನು ಜ.14 ಮತ್ತು ಜ.15ರಂದು ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದ ಎಪಿಎಂಸಿ ಆವರಣದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಹಳೇಬೀಡಿನ ಪುಷ್ಪಗಿರಿ ಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14ರಂದು ಬೆಳಗ್ಗೆ 7.30ಕ್ಕೆ ಷಟಸ್ಥಳ ಧ್ವಜಾರೋಹಣ, 8ಕ್ಕೆ ಸಿದ್ಧರಾಮೇಶ್ವರರ ಮೆರವಣಿಗೆ ನಡೆಯಲಿದೆ. 11ಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮಧ್ಯಾಹ್ನ 3ಕ್ಕೆ ಶರಣ ಸಾಹಿತ್ಯ ಗೋಷ್ಠಿಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ‘ಬಿಟ್ಟು ಬಂದಳ್ಳಿಯ ಕಥೆಗಳು’ ಗ್ರಂಥ ಬಿಡುಗಡೆ ಮಾಡಲಿದ್ದಾರೆ.
ಚಿತ್ರನಟ ಡಾಲಿ ಧನಂಜಯ ಕ್ಯಾಲೆಂಡರ್ ಬಿಡುಗಡೆಗೊಳಿಸಲಿದ್ದಾರೆ. ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಜ.15ರಂದು ಬೆಳಿಗ್ಗೆ 9ಕ್ಕೆ ಮಹಿಳಾ ಗೋಷ್ಠಿಯನ್ನು ಸಂಸದ ಶಿವಕುಮಾರ ಉದಾಸಿ ಉದ್ಘಾಟಿಸಲಿದ್ದಾರೆ. ತುಮಕೂರು ಶಾಸಕ ಜ್ಯೋತಿ ಗಣೇಶ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 11ಕ್ಕೆ ಕೃಷಿ ಗೋಷ್ಠಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ. ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಧ್ಯಾಹ್ನ 3ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ. ಎರಡು ದಿನ ನಡೆಯುವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು, ಶಾಸಕರು, ಮಾಜಿ ಶಾಸಕರು, ಗಣ್ಯರು ಭಾಗವಹಿಸಲಿದ್ದಾರೆ.
ಸುಮಾರು 2ರಿಂದ 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲು ಸಾರಿಗೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಾವೇರಿ ಉಪಸಮಿತಿ ಅಧ್ಯಕ್ಷ ಎಸ್.ಕೆ. ಮೆಣಸಿನಹಾಳ, ಸ್ವಾಗತ ಸಮಿತಿ ಕಾರ್ಯದರ್ಶಿ ಪ್ರಭುಲಿಂಗಪ್ಪ ದೊಡ್ಡಮನಿ, ಚಂದ್ರು ಕರೆಮ್ಮನವರ, ಮಲ್ಲೇಶಪ್ಪ ಅಡವಿ, ಎಸ್.ಆರ್. ಪಾಟೀಲ, ಜಯಣ್ಣ ಮಲ್ಲಿಗಾರ, ಎಂ.ಎನ್. ಕೆಂಪಗೌಡ್ರ, ಸಿದ್ಧರಾಮೇಶ ಇತರರು ಇದ್ದರು.