ಮುಂದಿನ ಚುನಾವಣೆಯಲ್ಲೂ ಸಿದ್ದು ಸ್ಪರ್ಧೆ ಖಚಿತ: ಬೈರತಿ

| Published : Oct 29 2025, 01:15 AM IST

ಸಾರಾಂಶ

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕಾಂಗ್ರೆಸ್‌ ಪಕ್ಷಕ್ಕೆ ಒಳ್ಳೆಯದಾಗಬೇಕಾದರೆ ಅವರು ಸ್ಪರ್ಧೆ ಮಾಡಲೇಬೇಕು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕಾಂಗ್ರೆಸ್‌ ಪಕ್ಷಕ್ಕೆ ಒಳ್ಳೆಯದಾಗಬೇಕಾದರೆ ಅವರು ಸ್ಪರ್ಧೆ ಮಾಡಲೇಬೇಕು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

‘ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವುದಿಲ್ಲ ಎಂಬುದು ಸುಳ್ಳು. 2028 ರ ಚುನಾವಣೆಯಲ್ಲೂ ಅವರು ಸ್ಪರ್ಧಿಸಬೇಕೆಂಬುದು ನಮ್ಮೆಲ್ಲರ ಹಕ್ಕೊತ್ತಾಯ’ ಎಂದು ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಾಗಬೇಕಾದರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧೆ ಮಾಡಲೇಬೇಕು ಎಂದು ಸುರೇಶ್ ಹೇಳಿದರು.

ಸಂಪುಟ ಪುನರ್‌ರಚನೆ ಹೈಕಮಾಂಡ್ ನಿರ್ಧಾರ:

ಸಚಿವ ಸಂಪುಟ ಪುನರ್‌ ರಚನೆ, ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನೇಮಕಾತಿ ಸೇರಿ ಇನ್ನಿತರ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ಸಮರ್ಥವಾಗಿದೆ. ಈ ಬಗ್ಗೆ ನಾವು ಅನಗತ್ಯವಾಗಿ ಮಾತನಾಡುವ ಅವಶ್ಯಕತೆಯಿಲ್ಲ.

ಪ್ರಸ್ತುತ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರಿದ್ದಾರೆ. ಮುಂದೆ ಏನಾಗಬೇಕು? ಏನು ನಿರ್ಧಾರ ತೆಗೆದುಕೊಳ್ಳಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.