ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಗೆ ಸಿದ್ದು ಚಾಲನೆ

| Published : Sep 05 2025, 01:00 AM IST

ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಗೆ ಸಿದ್ದು ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಯ ಉಪಜಾತಿಯ ಸಮೀಕ್ಷೆ ಪೂರ್ಣಗೊಂಡ ನಂತರ ಇದೀಗ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಯ ಉಪಜಾತಿಯ ಸಮೀಕ್ಷೆ ಪೂರ್ಣಗೊಂಡ ನಂತರ ಇದೀಗ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಅದರ ಜತೆಗೆ ದೇಶದಲ್ಲಿ ಇದೇ ಮೊದಲ ಬಾರಿ ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ ನೀಡಲಾಗಿದೆ.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಡಿ ಕೈಗೊಳ್ಳಲಾಗುತ್ತಿರರುವ ಎರಡು ಸಮೀಕ್ಷೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿ, ಸಮೀಕ್ಷೆಗೆ ಸಂಬಂಧಿಸಿದ ಪೋಸ್ಟರ್‌ ಬಿಡುಗಡೆ ಮಾಡಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್‌, ನಿಗಮದ ಅಧ್ಯಕ್ಷೆ ಪದ್ಮಾವತಿ, ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ಬಾಬು ಇತರರಿದ್ದರು.

ಲಿಂಗತ್ವ ಅಲ್ಪಸಂಖ್ಯಾತರಿಂದಲೇ ಸಮೀಕ್ಷೆ:

ಲಿಂಗತ್ವ ಅಲ್ಪಸಂಖ್ಯಾತರಿಂದಲೇ ಸಮೀಕ್ಷೆ ದೇಶದಲ್ಲೇ ಮೊದಲ ಬಾರಿಗೆ ನಡೆಸಲಾಗುತ್ತಿದೆ. ಅದಕ್ಕಾಗಿ ಕರ್ಮಣಿ (KARMANI) ಹೆಸರಿನ ವೆಬ್‌ ಅಪ್ಲಿಕೇಷನ್‌ ಸಿದ್ಧಪಡಿಸಲಾಗಿದೆ. ಅಲ್ಲದೆ, ಸಮೀಕ್ಷೆಯನ್ನು ರಾಜ್ಯದ ಎಲ್ಲ ತಾಲೂಕುಗಳ ಸರ್ಕಾರಿ ಆಸ್ಪತ್ರೆ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗುತ್ತದೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಂದಲೇ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಅಲ್ಲದೆ, ಈ ಸಮೀಕ್ಷೆ ಮೇಲೆ ನಿಗಾವಹಿಸಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿ ರಚಿಸಲಾಗಿದೆ. ಅದರಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡ ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳು ಇರಲಿವೆ.

15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮರುಸಮೀಕ್ಷೆ:

ಮಾಜಿ ದೇವದಾಸಿಯರಿಗೆ ಸೂಕ್ತ ಸೌಲಭ್ಯ ಒದಗಿಸುವ ಸಂಬಂಧ ಮರುಸಮೀಕ್ಷೆ ನಡೆಸಲಾಗುತ್ತಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತು ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ.

ಮರುಸಮೀಕ್ಷೆಗಾಗಿ ಸೇವಾ ಸಿಂಧು ವೆಬ್‌ ಪೋರ್ಟಲ್‌ನಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ವೆಬ್‌ ಅಪ್ಲಿಕೇಷನ್‌ ಅಳವಡಿಸಲಾಗಿದೆ. ಸಮೀಕ್ಷೆಯಲ್ಲಿ 15 ಜಿಲ್ಲೆಗಳ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತದೆ. ಅಲ್ಲದೆ, ಸಮೀಕ್ಷಾದಾರರನ್ನು ನೇಮಿಸಲಾಗಿದ್ದು, ಅವರೊಂದಿಗೆ ದೇವದಾಸಿ ಪುನರ್ವಸತಿ ಯೋಜನಾ ಘಟಕದ ಅಧಿಕಾರಿ, ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ಈ ಸಮೀಕ್ಷೆದಾರರಿಗೆ ವಿವಿಧ ಹಂತದ ತರಬೇತಿ ನೀಡಲಾಗಿದೆ.

ಸಮೀಕ್ಷೆಯ ಕಾರ್ಯನಿರ್ವಹಣೆಗಾಗಿ ಮಾಜಿ ದೇವದಾಸಿ ಮಹಿಳೆಯರ ಸಂಘಟನೆಗಳ ಪ್ರತಿನಿಧಿಗಳನ್ನೊಳಗೊಂಡ ವಿವಿಧ ಹಂತಗಳಲ್ಲಿ ಆಂತರಿಕ ಸಮಿತಿ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ.

-ಬಾಕ್ಸ್‌-

ಸಹಾಯವಾಣಿ ಆರಂಭ

ಎರಡೂ ಸಮೀಕ್ಷೆಗಳು ಸೆ. 15ರಿಂದ ಆರಂಭವಾಗಲಿದ್ದು, ರಜಾದಿನಗಳನ್ನು ಹೊರತುಪಡಿಸಿ 45 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಸಮೀಕ್ಷೆಯ ಕುರಿತು ಸಂಬಂಧಪಟ್ಟವರಿಗೆ ಅನುಕೂಲವಾಗುವಂತೆ ಮಾಡಲು 1800 599 2025 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ.