ಸಾರಾಂಶ
ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.
ಗುರುವಾರ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಲಾಯಿತು. ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೈರು ಹಾಜರಾಗಿದ್ದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉಪನಾಯಕ ಅರವಿಂದ್ ಬೆಲ್ಲದ್, ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಆರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಜನಾರ್ದನ ರೆಡ್ಡಿ, ಗೋಪಾಲಯ್ಯ, ಸಿದ್ದು ಸವದಿ ಸೇರಿದಂತೆ ಬಹುತೇಕ ಎಲ್ಲಾ ಶಾಸಕರು, ಮುಖಂಡರು ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ಶಾಸಕರು, ಮುಖಂಡರು ವಿಧಾನಸೌಧದೊಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪಶ್ಚಿಮದ್ವಾರದ ಬಳಿಯೇ ಪ್ರತಿಭಟನಾಕಾರರನ್ನು ತಡೆದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.
ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ನ್ಯಾಯಾಲಯವೇ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ನೀಡಿದೆ. ಹೀಗಿರುವಾಗ ಯಾವ ಮುಖ ಹೊತ್ತು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ? ಮತ್ತೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಲು ಭಂಡತನ ತೋರಬಾರದು. 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ವಿರುದ್ಧ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದ ಅವರ ಮುಖಕ್ಕೆ ಈಗ ಅಳಿಸಲಾಗದ ದೊಡ್ಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರಿಗೆ ದೇಶದ ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದು ವೇಳೆ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂದು ಸಾಬೀತಾದರೆ ಪುನಃ ಅವರೇ ಅಧಿಕಾರದಲ್ಲಿ ಮುಂದುವರೆಯಬಹುದು. ಅವರು ಅಧಿಕಾರದಲ್ಲಿದ್ದರೆ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು.
ವಿಧಾನಸಭೆ ವಿಸರ್ಜಿಸಿ: ಅಶೋಕ್ ಸವಾಲು
ವಿಧಾನಸಭೆ ವಿಸರ್ಜನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಿಂದೆ ರಾಜ್ಯದ ಜನರಿದ್ದಾರೆ ಎಂಬುದನ್ನು ತೋರಿಸಿಕೊಟ್ಟರೆ ಬಿಜೆಪಿ ಅವರ ವಿರುದ್ಧ ಪ್ರತಿಭಟನೆಯನ್ನೇ ಮಾಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸವಾಲು ಹಾಕಿದರು.
ಸಿದ್ದರಾಮಯ್ಯ ವಿಧಾನಸಭೆ ವಿಸರ್ಜನೆಗೆ ಮುಂದಾದರೆ ಕಾಂಗ್ರೆಸ್ಸಿನ 136 ಶಾಸಕರ ಪೈಕಿ 135 ಶಾಸಕರೂ ಅವರ ಜೊತೆ ಇರುವುದಿಲ್ಲ. ಜಮೀರ್, ಮಹದೇವಪ್ಪ, ಕಾಕಾ ಪಾಟೀಲ್ ಸಹ ಇರುವುದಿಲ್ಲ ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಅಭಿವೃದ್ಧಿ ಕನಸಿನ ಮಾತಾಗಿದೆ. ಲೂಟಿ, ಭ್ರಷ್ಟಾಚಾರ ಮಿತಿಮೀರಿದೆ. ಕಾಂಗ್ರೆಸ್ ಸರ್ಕಾರಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಮಾಡುವ ಅಧಿಕಾರ, ಯೋಗ್ಯತೆ ಇಲ್ಲ. ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಕೊಡುವುದೊಂದೇ ಮುಂದಿನ ದಾರಿ ಎಂದು ಕಿಡಿಕಾರಿದರು.
ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತನಿಖೆ ಮೇಲೆ ಪ್ರಭಾವ ಬೀರುತ್ತಾರೆಂದು ಹೇಳಿದ್ದರು. ನಿಷ್ಪಕ್ಷಪಾತ ತನಿಖೆಯಾಗಲು ಸಾಧ್ಯವಿಲ್ಲ ಎಂದಿದ್ದರು. ಈಗ ಅವರು ಅದೇ ಸ್ಥಾನದಲ್ಲಿದ್ದು, ಇದು ಸಹ ಭ್ರಷ್ಟಾಚಾರದ ಪ್ರಕರಣವಾಗಿದೆ. ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಬಂದಿದ್ದು, ಸಿದ್ದರಾಮಯ್ಯನವರಿಗೆ ರಾಜೀನಾಮೆ ಬಿಟ್ಟು ಬೇರೇನೂ ಮಾಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಿಂದ ಜೆಡಿಎಸ್ ದೂರ!
ಪ್ರತಿಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪ್ರತಿಭಟನೆಯಲ್ಲಿ ಭಾಗಿಯಾಗದೆ ದೂರ ಉಳಿದಿತ್ತು. ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ ಪ್ರತಿಭಟನೆಯಲ್ಲಿ ಜೆಡಿಎಸ್ ಸಹ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಜೆಡಿಎಸ್‌ನ ಯಾವೊಬ್ಬ ನಾಯಕರೂ ಸಹ ಭಾಗಿಯಾಗಿರಲಿಲ್ಲ. ಪ್ರತಿಭಟನೆಯಲ್ಲಿ ಯಾವ ಕಾರಣಕ್ಕಾಗಿ ಜೆಡಿಎಸ್ ಭಾಗಿಯಾಗಿಲ್ಲ ಎಂಬುದು ತಿಳಿದುಬಂದಿಲ್ಲ.