ರಾಜ್ಯ ಸರ್ಕಾರ ರಾಜ್ಯದ 23 ತಾಲೂಕುಗಳನ್ನು ಮತ್ತೆ ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕನ್ನು ಹೊರತುಪಡಿಸಿರುವುದು ದುರ್ದೈವದ ಸಂಗತಿಯಾಗಿದೆ. ಸರ್ಕಾರ ಹಿರೇಕೆರೂರು ತಾಲೂಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ದೂರಿದರು.
ಹಿರೇಕೆರೂರು: ರಾಜ್ಯ ಸರ್ಕಾರ ರಾಜ್ಯದ 23 ತಾಲೂಕುಗಳನ್ನು ಮತ್ತೆ ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕನ್ನು ಹೊರತುಪಡಿಸಿರುವುದು ದುರ್ದೈವದ ಸಂಗತಿಯಾಗಿದೆ. ಸರ್ಕಾರ ಹಿರೇಕೆರೂರು ತಾಲೂಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ದೂರಿದರು.
ತಾಲೂಕಿನ ಬಾಳಂಬೀಡ ಗ್ರಾಮದ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರೇಕೆರೂರು ತಾಲೂಕಿನಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ. ಯಾವ ಮಾನದಂಡದ ಆಧಾರದ ಮೇಲೆ ತಾಲೂಕನ್ನು ಬರಗಾಲ ಘೋಷಣೆಯಿಂದ ಕೈಬಿಡಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ ಅವರು, ತಾಲೂಕಿನಲ್ಲಿ ರೈತರು ಎರಡು ಬಾರಿ ಬಿತ್ತನೆ ಮಾಡಿದ್ದರೂ ಸಮರ್ಪಕ ಬೆಳೆ ಹಾಗೂ ಇಳುವರಿ ದೊರೆತಿಲ್ಲ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರೇಕೆರೂರು ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡದಿರುವುದು ರೈತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದರು.ರೈತರಿಗೆ ಈ ಹಿಂದೆ 7 ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದ್ದ ಸರ್ಕಾರ ಸದ್ಯ 5 ಗಂಟೆಗಳ ಕಾಲ ಮಾತ್ರ ವಿದ್ಯುತ್ ನೀಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇಂತಹ ಬರಗಾಲದ ಪರಿಸ್ಥಿಯಲ್ಲಿ ಅಲ್ಪ ಸ್ವಲ್ಪ ಬೆಳೆ ಬೆಳೆದುಕೊಳ್ಳಲು ಸರ್ಕಾರ ವಿದ್ಯುತ್ ಕಡಿತ ಮಾಡಿದ್ದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ರೈತರ ಕೆರೆಗಳನ್ನು ತುಂಬಿಸುವ ಯೋಜನೆಯ ಬಗ್ಗೆಯೂ ಸರ್ಕಾರ ಸೂಕ್ತ ಕಾಳಜಿ ವಹಿಸುತ್ತಿಲ್ಲ ಎಂದು ಬಿ.ಸಿ. ಪಾಟೀಲ್ ಆರೋಪಿಸಿದರು.ಮೋಡ ಬಿತ್ತನೆ ಯೋಜನೆಯ ಹೆಸರಿನಲ್ಲಿ ಸರ್ಕಾರ ರೈತರಿಗೆ ಮೋಸ ಮಾಡುತ್ತಿದ್ದು, ಹಣ ಲೂಟಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಗಮನಹರಿಸುತ್ತಿಲ್ಲ. ಕೂಡಲೇ ಹಿರೇಕೆರೂರು ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಈ ಒತ್ತಾಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ಬೆಳಗ್ಗೆ 10 ಗಂಟೆಗೆ ಹಿರೇಕೆರೂರು ಪಟ್ಟಣದ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.ತಾಲೂಕಿನ ಎಲ್ಲಾ ರೈತ ಬಾಂಧವರು, ಪಕ್ಷದ ಮುಖಂಡರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಸದಸ್ಯರು, ಜಿಪಂ ಮತ್ತು ತಾಪಂ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಬಿ.ಸಿ. ಪಾಟೀಲ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರೇಕೆರೂರು ಮಂಡಲದ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಾಂತಿಮಠ, ಯುವ ಮೋರ್ಚಾ ಅಧ್ಯಕ್ಷೆ ಜಗದೀಶ್ ದೊಡ್ಡಗೌಡ, ಪರಮೇಶಪ್ಪ ಹಲಗೇರಿ, ನಾಗರಾಜ ಬಣಕಾರ, ಹುಚ್ಚನಗೌಡ ಕೋಡ ಇದ್ದರು.