ಸಾರಾಂಶ
ಮಂಗಳೂರು: ಮತ ಕಳ್ಳತನ ದೇಶದ ಅತಿ ದೊಡ್ಡ ಚುನಾವಣಾ ಹಗರಣವಾಗಿದ್ದು, ಇದರ ವಿರುದ್ಧ ಎಐಸಿಸಿ ಅ.15ರವರೆಗೆ ದೇಶವ್ಯಾಪಿ ‘ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ’ ಅಭಿಯಾನ ಆಯೋಜಿಸಿದ್ದು, ಇದನ್ನು ಯಶಸ್ವಿಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕರೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.ಈ ಅಭಿಯಾನವು ರಾಜಕೀಯ ಕಾರ್ಯಕ್ರಮವಲ್ಲ. ಸಂವಿಧಾನ ರಕ್ಷಣೆ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 5 ಸಾವಿರ ಸಹಿ ಸಂಗ್ರಹಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.24ರಂದು ವೇಣುಗೋಪಾಲ್ ಮಂಗಳೂರಿಗೆ:ಸೆ.24ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಂಗಳೂರಿಗೆ ಆಗಮಿಸಲಿದ್ದು, ಅವರನ್ನು ಎಲ್ಲ ಮುಖಂಡರು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಬೇಕು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲೆಯ ಬಿಎಲ್ಎ- 2ಗಳ ಸಮಾವೇಶ ನಡೆಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಸೆಪ್ಟೆಂಬರ್ ತಿಂಗಳೊಳಗೆ ಆಯಾ ವಿಧಾನಸಭಾ ಕ್ಷೇತ್ರಗಳ ಬಿ.ಎಲ್.ಎ.ಗಳಿಗೆ ತರಬೇತಿ ಶಿಬಿರ ಆಯೋಜಿಸಲು ಬ್ಲಾಕ್ ಅಧ್ಯಕ್ಷರು ಅಗತ್ಯ ಕ್ರಮ ವಹಿಸಬೇಕು ಎಂದು ಹರೀಶ್ ಕುಮಾರ್ ತಿಳಿಸಿದರು.ಇದೇ ಸಂದರ್ಭ ಇತ್ತೀಚಿಗೆ ನಡೆದ ಕಡಬ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಮುಖಂಡರನ್ನು ಅಭಿನಂದಿಸಲಾಯಿತು.
ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು ಇದ್ದರು.