ಸಾರಾಂಶ
ಏ.5 ಕ್ಕೆ ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14ಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸುವ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ಡೀಸಿ ಚಂದ್ರಶೇಖರ ನಾಯಕ ಹೇಳಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಏ.5 ಕ್ಕೆ ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14ಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕಸಭೆ ಚುನಾವಣೆಯ ನೀತಿ ಸಂಹಿತೆಯು ಜಾರಿಯಲ್ಲಿರುವ ಕಾರಣ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಏ.5ಕ್ಕೆ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14ಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ ಮಾಡಲಾಗುವುದು ಎಂದರು.ಬೇಸಿಗೆಗಾಲ ಇರುವುದರಿಂದ ಅಂದು ಮಹನೀಯರ ಪುತ್ಥಳಿಗಳ ಹತ್ತಿರ ಕುಡಿಯುವ ನೀರಿನ ವ್ಯವಸ್ಥೆ, ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಮದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು, ನಗರಸಭೆ ಪೌರಾಯುಕ್ತ ಚಲಪತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಶರಣಮ್ಮ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.