ಸಾರಾಂಶ
ಕಾರವಾರ: ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಆಸ್ಪತ್ರೆ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.
ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತ ಬಹುದಿನದ ಬೇಡಿಕೆಯಿದೆ. ಎಲ್ಲ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ವೈದ್ಯಕೀಯ ಕಾಲೇಜಿನಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಅದಕ್ಕೆ ಬೇಕಾದ ಉಪಕರಣ ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದರು.ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ₹ 3.75 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸಲಿದ್ದು, ಮುಂದಿನ ಎರಡು ತಿಂಗಳೊಳಗಾಗಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಸ್ಥಳೀಯ ಜನರ ಚಿಕಿತ್ಸೆಗೆ ಅನುಕೂಲವಾಗಲಿದೆ. ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆಗೆ ಹಾಗೂ ಹೊರ ರಾಜ್ಯಕ್ಕೆ ಚಿಕಿತ್ಸೆ ತೆರಳುವುದು ತಪ್ಪಲಿದೆ ಎಂದು ಅಭಿಪ್ರಾಯಿಸಿದರು.
ಶಾಸಕ ಸತೀಶ ಸೈಲ್ ಮಾತನಾಡಿ, ಜಿಲ್ಲೆಯ ಜನರ ಬೇಡಿಕೆಗೆ ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸ್ಪಂದಿಸುವ ಮೂಲಕ ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಗೆ ಶಿಲಾನ್ಯಾಸ ಮಾಡಿರುವುದು ಸಂತೋಷವಾಗಿದೆ. ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ 450 ಹಾಸಿಗೆಯ ಆಸ್ಪತ್ರೆ ಜತೆಗೆ ಕ್ಯಾನ್ಸರ್ ಕೇಂದ್ರ ಸ್ಥಾಪನೆಯಿಂದ ಸ್ಥಳಿಯ ಜನರಿಗೆ ತುಂಬ ಅನುಕೂಲವಾಗಲಿದೆ. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಗೆ ಸಚಿವರು ಸ್ಪಂದಿಸಲಿದ್ದಾರೆ ಎಂಬ ನಿರೀಕ್ಷೆಯಿದೆ. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಕೈ ಜೋಡಿಸುವ ಮೂಲಕ ಮುಖ್ಯಮಂತ್ರಿಗೆ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಮನವರಿಕೆ ಮಾಡೋಣ ಎಂದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಈಶ್ವರಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠ ನಾರಾಯಣ ಎಂ., ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ, ಉಪಾಧ್ಯಕ್ಷೆ ಪ್ರೀತಿ ಜೋಶಿ, ಸದಸ್ಯೆ ರೋಷನಿ ಮಾಳಸೇಕರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ಘಟಕದ ಮುಖ್ಯ ಅಭಿಯಂತರ ಜೆ.ಆರ್. ಮುಕ್ಕಣ್ಣನಾಯ್ಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕಿ ಡಾ.ಪೂರ್ಣಿಮಾ ಆರ್.ಟಿ., ವೈದ್ಯಕೀಯ ಅಧೀಕ್ಷಕ ಡಾ. ಶಿವಾನಂದ ಕುಡ್ತರಕರ್, ಆರ್ಥಿಕ ಸಲಹೆಗಾರ ಆನಂದಸಾ ಹಬೀಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ. ಮೊದಲಾದವರು ಇದ್ದರು.
ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.