ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅಧಿಕಾರಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಕಲಬುರಗಿಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅಧಿಕಾರಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.ನಗರದ ಎಸ್.ಬಿ. ಕನ್ವೆನ್ಷನ್ ಹಾಲ್ನಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘ, ಬೆಂಗಳೂರು ವತಿಯಿಂದ ಆಯೋಜಿಸಿದ್ದ ಗ್ರಾಮ ವಿಕಾಸ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ ಜನತೆಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ, ಸರ್ಕಾರದ ಆಡಳಿತ ಯಂತ್ರದ ಭಾಗವಾಗಿರುವ ಪಿಡಿಒಗಳು ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಅವುಗಳ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಗ್ರಾಮಗಳು ನಾಡಿನ ನಾಡಿಮಿಡಿತವಾಗಿದ್ದು, ಅಲ್ಲಿನ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಜವಾಬ್ದಾರಿ ಪಿಡಿಒಗಳ ಮೇಲಿದೆ. ಸರ್ಕಾರದ ಬಹುತೇಕ ಯೋಜನೆಗಳ ಅನುಷ್ಠಾನದ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂಬ ಅರಿವು ನನಗಿದೆ. ಹೀಗಾಗಿ ನಿಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಸಾಧಕ-ಬಾಧಕಗಳನ್ನು ಪರಿಶೀಲಿಸಿ ಬೇಡಿಕೆಗಳ ಈಡೇರಿಕೆಗೆ ಆದ್ಯತೆ ನೀಡಲಾಗುವುದು. ಅದೇ ರೀತಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರಕ್ಕೆ ಗೌರವ ತರಬೇಕು ಎಂದರು.ಮನರೇಗಾ ಯೋಜನೆಯ ಯಶಸ್ಸಿನಲ್ಲಿ ಪಿಡಿಒಗಳ ಕೊಡುಗೆ ಮಹತ್ವದ್ದಾಗಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಶಾಶ್ವತ ಆಸ್ತಿಗಳು ಸೃಷ್ಟಿಯಾಗಿವೆ. ಇದೀಗ ಯೋಜನೆ ವಿಬಿ-ಜಿ-ರಾಮ್-ಜಿ ಯೋಜನೆಯಾಗಿ ಬದಲಾಗಿದ್ದು, ಅದನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ ಎಂದರು.ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಉಂಟಾದ ಕಡೆಗಳಲ್ಲಿ ಲಭ್ಯವಿರುವ ಅನುದಾನ ಬಳಸಿಕೊಂಡು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಬರದ ಹಿನ್ನೆಲೆಯಲ್ಲಿ ಗ್ರಾಮೀಣ ಜನರು ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಪಿಡಿಒಗಳ ಜೇಷ್ಠತಾ ಪಟ್ಟಿ ಹಾಗೂ ಬಿ-ಗ್ರೂಪ್ ಹುದ್ದೆ ಉನ್ನತೀಕರಣದ ಬೇಡಿಕೆ ಕುರಿತು ಮಾತನಾಡಿದ ಅವರು, ಹಿರಿಯರು ಮತ್ತು ಕಿರಿಯರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ರೀತಿಯಲ್ಲಿ ಬಿ-ಗ್ರೂಪ್ ಹುದ್ದೆ ಉನ್ನತೀಕರಣ ಮಾಡುವ ವಿಚಾರಕ್ಕೆ ವೈಯಕ್ತಿಕವಾಗಿ ತಮ್ಮ ವಿರೋಧವಿಲ್ಲ. ಈ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಚರ್ಚಿಸಲಾಗುವುದು. ನ.17ರಂದು ಬೆಳಿಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಅಡ್ವಕೇಟ್ ಜನರಲ್ ಅವರ ಸಭೆ ಕರೆಯಲಾಗಿದ್ದು, ಈ ಸಮಸ್ಯೆ ಕುರಿತು ಚರ್ಚಿಸಲಾಗುವುದು. ಅಲ್ಲದೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೂ ಸಮಾಲೋಚನೆ ನಡೆಸಿ ಅಧಿಕಾರಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಚೌದಾಪುರಿ ಮಠದ ರಾಜಶೇಖರ ಶಿವಾಚಾರ್ಯರು ಸಾನಿಧ್ಯ ವಹಿಸಿದರು, ಶಾಸಕ ಅಲ್ಲಮಪ್ರಭು ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು, ಮುಖಂಡ ಶರಣು ಮೋದಿ, ಜಿ.ಪಂ ಸಿಇಒ ರಾಹುಲ್ ಸಂಕನೂರ, ಪಂಚಾಯತ್ ಅಧಿಕಾರಿಗಳ ಉನ್ನತೀಕರಣ ಸಂಘದ ರಾಜ್ಯಾಧ್ಯಕ್ಷ ರಮೇಶ ನಡಗೇರಿ, ಪದಾಧಿಕಾರಿಗಳಾದ ಜಯಗೌಡ ಪಾಟೀಲ್, ಕು. ರಾಜೇಶ್ವರಿ ಸಾಹು, ವಿಶ್ವನಾಥ, ಹಣಮಂತ ಕರ್ಣಕೋಟೆ, ನೇತ್ರಾವತಿ, ಅನಸೂಯಾ ಅಷ್ಟಗಿ, ಸೌಮ್ಯ, ಪಾರ್ವತಿ ಪೂಜಾರಿ, ಜ್ಯೋತಿ, ವಿಜೇತಾ, ವೀಣಾ, ನಾಗರತ್ನ, ಶರ್ಭುದ್ದೀನ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪಿಡಿಒಗಳು ಇದ್ದರು.
ನಮ್ಮದು ನ್ಯಾಯಯುತ ಬೇಡಿಕೆಯಾಗಿದೆ. ಸಚಿವರಾದ ಈಶ್ವರ ಖಂಡ್ರೆ ಅವರು ತಮ್ಮ ಅವಧಿಯಲ್ಲಿ ನಮ್ಮ ಬೇಡಿಕೆ ಈಡೆರಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಪಿಡಿಒ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ ರಾಜ್ಯ ಉಪಾಧ್ಯಕ್ಷೆ ರಾಜೇಶ್ವರಿ ಸಾಹು ಹೇಳಿದರು.