ಶೇ.97ರಷ್ಟು ಗಣತಿ ನಮೂನೆ ವಿತರಣೆ, ಶೇ.30ರಷ್ಟು ಡಿಜಿಟಲೀಕರಣ: ಜಿಲ್ಲಾಧಿಕಾರಿ ಜಿ.ಪ್ರಭು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದ್ದು, ಗಣತಿ ನಮೂನೆಗಳ ವಿತರಣೆ ಹಾಗೂ ಮತದಾರರ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸುವ ಗಣಕೀಕರಣ ಕಾರ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಒಟ್ಟು 10,69,504 ಮತದಾರರ ಪೈಕಿ 10,31,113 ಮಂದಿಗೆ ಈಗಾಗಲೇ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದು ಶೇ.97ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದ 38,391 ಮತದಾರರಿಗೂ ಮುಂದಿನ ಒಂದೆರಡು ದಿನಗಳಲ್ಲಿ ನಮೂನೆಗಳನ್ನು ತಲುಪಿಸುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕಾಲಮಿತಿಯೊಳಗೆ ಹಾಗೂ ಪಾರದರ್ಶಕವಾಗಿ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಓ) ಕಳೆದ ಜೂನ್ 30ರಿಂದ ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಮತದಾರರಿಂದ ಅಗತ್ಯ ದಾಖಲೆಗಳು, ವೈಯಕ್ತಿಕ ಮಾಹಿತಿ ಹಾಗೂ ಭಾವಚಿತ್ರಗಳನ್ನು ಸಂಗ್ರಹಿಸಿ ಆನ್‌ಲೈನ್ ತಂತ್ರಾಂಶದಲ್ಲಿ ದಾಖಲಿಸುತ್ತಿದ್ದಾರೆ ಎಂದು ಹೇಳಿದರು.


ಈ ಕಾರ್ಯದಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಮತಗಟ್ಟೆ ಮಟ್ಟದ ಏಜೆಂಟರು (ಬಿಎಲ್ಎ) ಉತ್ತಮ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ವಿಶೇಷವಾಗಿ ಮತಗಟ್ಟೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿರುವ ಪರಿಣಾಮ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್. ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.ಸಿಕೆಬಿ-2 ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿದರು