ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯ 2627 ಮತಗಟ್ಟೆಗಳ ಒಟ್ಟು 22,98,879 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಣೆ ಮಾಡುವ ಮೂಲಕ ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯ 2627 ಮತಗಟ್ಟೆಗಳ ಒಟ್ಟು 22,98,879 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಣೆ ಮಾಡುವ ಮೂಲಕ ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಗಳ ಸಂಗ್ರಹಣೆ ಹಾಗೂ ಅವುಗಳ ಗಣಕೀಕರಣ ಕಾರ್ಯವನ್ನು ಸಹ ಜಿಲ್ಲೆಯಾದ್ಯಂತ ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಸುಗಮವಾಗಿ ಹಾಗೂ ನಿಖರವಾಗಿ ಪೂರ್ಣಗೊಳಿಸಲು ಮತಗಟ್ಟೆ ಮಟ್ಟದ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ.100 ರಷ್ಟು ಉತ್ತಮ ಸಾಧನೆ ಮಾಡಿದ ಮತಗಟ್ಟೆಗಳ ಬಿಎಲ್ಓ ಗಳನ್ನು ತಾಲೂಕು ಮಟ್ಟದಲ್ಲಿ ಪ್ರೋತ್ಸಾಹಿಸಿ, ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಗುಬ್ಬಿ, ಚಿಕ್ಕನಾಯಕನಹಳ್ಳಿ, ಶಿರಾ, ಹಾಗೂ ಕೊರಟಗೆರೆ ತಾಲೂಕುಗಳಲ್ಲಿ ಉತ್ತಮ ಸಾಧನೆ ಮಾಡಿದ 11 ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಲಾಗಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿಯೂ ಶೀಘ್ರದಲ್ಲೇ ಗಣಕೀಕರಣ ಕಾರ್ಯವನ್ನು ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ-2026 ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಕ್ರಮವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.