ಮಂಗಳೂರು: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳು ಹಾಗೂ ಮತದಾರರ ವಿವರಗಳಲ್ಲಿರುವ ವ್ಯತ್ಯಾಸಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಕಾಂಗ್ರೆಸ್ ಬಿಎಲ್‌ಎಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿಎಲ್‌ಎಗಳು ಹಾಗೂ ಕ್ಷೇತ್ರದ ಸಂಯೋಜಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಲವು ಪ್ರದೇಶಗಳಲ್ಲಿ ಮತದಾರರ ಹೆಸರುಗಳಲ್ಲಿ ವ್ಯತ್ಯಾಸ ಕಂಡುಬಂದಿರುವುದು ಹಾಗೂ ಕೆಲವರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಈಗಾಗಲೇ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರನ್ನು ಪರಿಶೀಲಿಸಿ, ನೈಜ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜಾ, ನೈಜ ಮತದಾರರ ಹೆಸರುಗಳಲ್ಲಿ ತಪ್ಪು ಮಾಹಿತಿ, ವಿಳಾಸದ ದೋಷ ಅಥವಾ ಇತರ ಕ್ಲೆರಿಕಲ್ ದೋಷಗಳಿಂದ ಹೆಸರುಗಳು ಕೈಬಿಟ್ಟಿರುವ ಸಾಧ್ಯತೆಯೂ ಇದೆ. ಆದ್ದರಿಂದ ಪ್ರತಿಯೊಂದು ಪ್ರಕರಣವನ್ನು ಸೂಕ್ತವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸುವ ಕೆಲಸವನ್ನು ಬಿಎಲ್‌ಎಗಳು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಸೂಚಿಸಿದರು.ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಬಿ. ಸಾಲಿಯಾನ್, ತರಬೇತುದಾರ ಅಮಿತಾ ಅಶ್ವಿನ್ ಹಾಗೂ 203 ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್‌ಗಳ ಸಂಯೋಜಕರು ಇದ್ದರು.