ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್‌ಐ ನೇಮಕಾತಿ ಅಕ್ರಮ: ಡಾ। ಅಶ್ವತ್ಥ್‌ಗೆ ಎಸ್‌ಐಟಿ ಗ್ರಿಲ್‌

| N/A | Published : Feb 03 2025, 12:31 AM IST / Updated: Feb 03 2025, 05:21 AM IST

Dr CN Ashwath Narayan
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್‌ಐ ನೇಮಕಾತಿ ಅಕ್ರಮ: ಡಾ। ಅಶ್ವತ್ಥ್‌ಗೆ ಎಸ್‌ಐಟಿ ಗ್ರಿಲ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ವಿಚಾರಣೆ ಎದುರಿಸಿದ್ದಾರೆ.

 ಬೆಂಗಳೂರು : ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ವಿಚಾರಣೆ ಎದುರಿಸಿದ್ದಾರೆ.

ಎಸ್‌ಐಟಿ ನೋಟಿಸ್‌ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಎಸ್‌ಐಟಿ ತನಿಖಾಧಿಕಾರಿ ಎದುರು ಹಾಜರಾಗಿ ಹೇಳಿಕೆ ನೀಡಿದ್ದಾರೆ.

ತಮಗೂ ಈ ಅಕ್ರಮ ನೇಮಕಾತಿಗೂ ಯಾವುದೇ ಸಂಬಂಧವಿಲ್ಲ. ತಮಗೆ ಯಾವುದೇ ಅಭ್ಯರ್ಥಿಯ ಪರಿಚಯವೂ ಇಲ್ಲ. ಯಾರಿಗೂ ಹುದ್ದೆ ಕೊಡಿಸಲು ಶಿಫಾರಸು ಕೂಡ ಮಾಡಿಲ್ಲ ಎಂದು ಡಾ.ಸಿ.ಎನ್‌.ಅಶ್ವತ್ಥನಾರಾಯಣ ತನಿಖಾಧಿಕಾರಿ ಎದುರು ಹೇಳಿಕೆ ನೀಡಿದ್ದಾರೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.

ಮಾಗಡಿ ಮೂಲದ ಕೆಲ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಶ್ವತ್ಥನಾರಾಯಣ ಅವರ ಪಾತ್ರವಿದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಅಶ್ವತ್ಥನಾರಾಯಣ ಅವರಿಗೆ ಎಸ್‌ಐಟಿಯಿಂದ ನೋಟಿಸ್‌ ನೀಡಲಾಗಿತ್ತು.

ಪ್ರಕರಣದ ಹಿನ್ನೆಲೆ:

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ 2021ರ ಅಕ್ಟೋಬರ್‌ನಲ್ಲಿ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿತ್ತು. ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಬ್ಲೂ ಟೂತ್‌ ಬಳಸಿ ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದರು. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿತ್ತು.

ಎಸ್‌ಐಟಿ ತನಿಖೆಯಲ್ಲಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿತ್ತು. 52 ಅಭ್ಯರ್ಥಿಗಳು, ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿ, ಡಿವೈಎಸ್ಪಿ, ಕಾನ್ಸ್‌ಟೇಬಲ್‌ಗಳು, ಇನ್ಸ್‌ಪೆಕ್ಟರ್‌ಗಳು, ಮಧ್ಯವರ್ತಿಗಳು ಸೇರಿ 100ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿತ್ತು.