ಸಾರಾಂಶ
ಶ್ರೀಶೈಲ ಮಠದ
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟವಾಗಿದ್ದು, ಚಿಕ್ಕೋಡಿ ಕ್ಷೇತ್ರದಿಂದ ನಿರೀಕ್ಷೆಯಂತೆಯೇ ಹಾಲಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರಿಗೆ ಟಿಕೆಟ್ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಚಿಕ್ಕೋಡಿ ಹಾದಿ ಸುಗಮವಾಗಿದ್ದರೇ ಬೆಳಗಾವಿ ಹಾದಿ ಮತ್ತೆ ಕಗ್ಗಂಟಾಗಿದೆ. ಬೆಳಗಾವಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುವುದು ತೀವ್ರ ಕುತೂಹಲ ಕೆರಳಿಸಿದೆ.
ಹಾಗೆ ನೋಡಿದರೇ ಚಿಕ್ಕೋಡಿ ಹಾಗೂ ಬೆಳಗಾವಿ ಈ ಎರಡೂ ಕ್ಷೇತ್ರಗಳು ಕೇಸರಿ ಪಡೆ ಭದ್ರಕೋಟೆ. ಈ ಕ್ಷೇತ್ರಗಳಲ್ಲಿನ ಬಿಜೆಪಿ ಭದ್ರಕೋಟೆ ಭೇದಿಸಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಎರಡೂ ಕ್ಷೇತ್ರದಿಂದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮಕ್ಕಳನ್ನು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ.ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಘಟಾನುಘಟಿ ನಾಯಕರ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತು ನಿಜ. ಆದರೆ, ನಿರೀಕ್ಷೆಯಂತೆಯೇ ಬಿಜೆಪಿ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಟಿಕೆಟ್ ಘೋಷಿಸಿದೆ. ಮಾಜಿ ಸಂಸದ ರಮೇಶ ಕತ್ತಿ, ಉದ್ಯಮಿ ಅಮಿತ ಕೋರೆ ಕೂಡ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದರು. ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಕೊನೆಗೂ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಮಣೆಹಾಕಿದೆ. ಈ ಮೂಲಕ ಚಿಕ್ಕೋಡಿ ಅಭ್ಯರ್ಥಿ ಆಯ್ಕೆ ಸುಗಮವಾದಂತಾಗಿದೆ. ಟಿಕೆಟ್ ಕೈತಪ್ಪಿರುವುದರಿಂದ ರಮೇಶ ಕತ್ತಿ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಕೆರಳಿಸುವಂತೆ ಮಾಡಿದೆ. ರಮೇಶ ಕತ್ತಿ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಇಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳಿದ್ದರೂ ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹೆಸರು ಪ್ರಮುಖವಾಗಿ ಕೇಳಿಬರುತ್ತಿವೆ. ಸಚಿವ ಸತೀಶ ತಮ್ಮ ಪುತ್ರಿಯಾಗಲಿ ನಮ್ಮ ಕುಟುಂಬದ ಸದಸ್ಯರಾಗಲಿ ಯಾರೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಅವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಒತ್ತಡ ಹೇರುತ್ತಲೇ ಬಂದಿದೆ.ಬೆಳಗಾವಿ ಅಭ್ಯರ್ಥಿ ಆಯ್ಕೆ ಕಗ್ಗಂಟು:
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಕಾಯ್ದಿರಿಸುವ ಮೂಲಕ ಬಿಜೆಪಿ ತೀವ್ರ ಕುತೂಹಲ ಕೆರಳಿಸಿದೆ. ಅಭ್ಯರ್ಥಿ ಆಯ್ಕೆ ವಿಚಾರ ಬೆಳಗಾವಿ ಕ್ಷೇತ್ರದಲ್ಲಿ ಕಗ್ಗಂಟಾಗಿದೆ.ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಲ ಅಂಗಡಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳು. ಇದರ ಜೊತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ನಿವೃತ್ತ ಐಎಎಸ್ ಅಧಿಕಾರಿ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಹೆಸರು ಕೂಡ ಕೇಳಿಬರುತ್ತಿವೆ. ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಿದ್ದು, ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುವುದು ಕುತೂಹಲ ಮೂಡಿಸಿದೆ. ಏತ್ಮಧ್ಯೆ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಘೋಷಣೆ ವಿಚಾರದಲ್ಲಿ ಕಾಯ್ದುನೋಡುವ ತಂತ್ರ ಅನುಸರಿಸುತ್ತಿದೆ.