ಸ್ಕಿಜೋಫ್ರೇನಿಯಾ ಬಗ್ಗೆ ಭಯಬೇಡ, ತಿಳಿವಳಿಕೆ ಇರಲಿ: ರಾಜೇಶ್ ಹೊಸಮನೆ

| Published : May 26 2024, 01:35 AM IST

ಸ್ಕಿಜೋಫ್ರೇನಿಯಾ ಬಗ್ಗೆ ಭಯಬೇಡ, ತಿಳಿವಳಿಕೆ ಇರಲಿ: ರಾಜೇಶ್ ಹೊಸಮನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾಮಾನ್ಯವಾಗಿ ಸ್ಕಿಜೋಫ್ರೇನಿಯಾ ರೋಗಿಗಳನ್ನು ಮನೆಯಲ್ಲಿಯೇ ಇಟ್ಟುಕೊಳ್ಳುವುದು ಅಪಾಯ ಎಂಬ ನಂಬಿಕೆ ಇತ್ತು.

ಬಳ್ಳಾರಿ: ಮಾನಸಿಕ ಕಾಯಿಲೆಗಳಲ್ಲಿಯೇ ತೀವ್ರ ಸ್ವರೂಪವಾದ ಸ್ಕಿಜೋಫ್ರೇನಿಯಾ ಕಾಯಿಲೆಯ ಬಗ್ಗೆ ಜಾಗೃತಿ ಇರಬೇಕು. ಭಯಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಹೊಸಮನೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಸ್ಕಿಜೋಫ್ರೇನಿಯಾ ರೋಗಿಗಳನ್ನು ಮನೆಯಲ್ಲಿಯೇ ಇಟ್ಟುಕೊಳ್ಳುವುದು ಅಪಾಯ ಎಂಬ ನಂಬಿಕೆ ಇತ್ತು. ಆದರೆ ಕಳೆದ 30 ವರ್ಷಗಳಿಂದ ಈಚೆಗೆ ವೈದ್ಯಕೀಯ ಕ್ಷೇತ್ರದಲ್ಲಾದ ಸಂಶೋಧನೆ ಹಾಗೂ ಬದಲಾದ ಚಿಕಿತ್ಸೆ ವಿಧಾನಗಳಿಂದ ಆರಂಭದಲ್ಲಿಯೇ ರೋಗಿಯ ಮನಃಸ್ಥಿತಿಗೆ ಅನುಸಾರವಾಗಿ ಕುಟುಂಬದ ಸದಸ್ಯರ ನೆರವಿನಿಂದ ಚಿಕಿತ್ಸೆ ನೀಡಿದರೆ ಕಾಯಿಲೆ ಬೇಗ ವಾಸಿಯಾಗಬಹುದು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್‍ಬಾಬು ಮಾತನಾಡಿ, ಸಾಮಾನ್ಯವಾಗಿ 15 ರಿಂದ 25 ವರ್ಷ ವಯಸ್ಸಿನ ಅವಧಿಯ ತರುಣರಲ್ಲಿ ಬರಬಹುದಾದ ಕಾಯಿಲೆಯಾಗಿದೆ. ವ್ಯಕ್ತಿಯ ಮನಸ್ಸಿನ ಕ್ರಿಯೆಗಳಲ್ಲಿ ಆಲೋಚನೆ, ಭಾವನೆಗಳನ್ನು ಹಾಗೂ ಪಂಚೇಂದ್ರಿಯಗಳ ಮೂಲಕ ತನ್ನ ಸುತ್ತಲಿನ ಪರಿಸರವನ್ನು ಅರ್ಥಮಾಡಿಕೊಳ್ಳಲಾಗದ ಪರಿಸ್ಥಿತಿಗೆ ಹೋಗುತ್ತಾನೆ ಎಂದರು.

ಮಾತ್ರೆ ಮತ್ತು ಚುಚ್ಚು ಮದ್ದು ರೂಪದಲ್ಲಿ ಔಷಧಿ ಲಭ್ಯವಿದ್ದು, ಕಾಯಿಲೆ ಕಾಣಿಸಿಕೊಂಡ ಕೆಲವೇ ವಾರದೊಳಗೆ ಔಷಧೋಪಚಾರ ಪ್ರಾರಂಭಿಸಿದರೆ ಬೇಗನೇ ಹತೋಟಿಗೆ ಬರುತ್ತದೆ. ಈಗಾಗಲೇ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದಿಂದ ಮನೋಚೈತನ್ಯ ಕಾಯ್ದೆ ಕಾರ್ಯಕ್ರಮದಡಿ ಪ್ರತಿ ಮಂಗಳವಾರ ಎಲ್ಲ ತಾಲೂಕು ಕೇಂದ್ರಗಳಲ್ಲಿ ಉಚಿತ ಆರೋಗ್ಯ ಶಿಬಿರ ತಪಾಸಣೆ ಏರ್ಪಡಿಸಿ, ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ರಮೇಶ್.ಜಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ ಎಸ್. ಕಟ್ಟಿಮನಿ ಇತರರಿದ್ದರು. ಜಾಥಾದಲ್ಲಿ ವಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಶಿಕ್ಷಣಾಥಿಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಜಾಥಾವು ಜಿಲ್ಲಾ ಆಸ್ಪತ್ರೆಯ ಆವರಣದಿಂದ ಆರಂಭವಾಗಿ ಸಂಗಂ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಮರಳಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕೊನೆಗೊಂಡಿತು.

25 ಬಿಆರ್‌ವೈ 2

ಸ್ಕಿಜೋಫ್ರೇನಿಯಾ ಕಾಯಿಲೆಯ ಬಗ್ಗೆ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಹೊಸಮನೆ ಚಾಲನೆ ನೀಡಿದರು.