ಹೊಸಪೇಟೆ: ಹರಪನಹಳ್ಳಿ, ಕೂಡ್ಲಿಗಿ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ಸ್ಲಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಮಳೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುತ್ತಿರುವ ಬಗ್ಗೆ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ. ಈ ಭಾಗಗಳಲ್ಲಿ ಸೂಕ್ತ ಜಮೀನನ್ನು ಗುರುತಿಸಿ, ವಿಶೇಷ ಪ್ಯಾಕೇಜ್ ಮೂಲಕ ನಿವೇಶನ ಕಲ್ಪಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ: ಎಲ್.ಮೂರ್ತಿ ತಿಳಿಸಿದರು.

ನಗರದ ವಿಜಯನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮಕ್ಕಳ ಆರೋಗ್ಯಕ್ಕೆ ಒತ್ತು, ಕೂಲಿ ಕಾರ್ಮಿಕರ ಮಕ್ಕಳಲ್ಲಿ ಕಂಡುಬರುತ್ತಿರುವ ರಕ್ತಹೀನತೆ ಮತ್ತು ಶಿಶು ಮರಣ ಪ್ರಮಾಣ ತಡೆಗಟ್ಟಲು ಆರೋಗ್ಯ ಇಲಾಖೆ ನಿಯಮಿತ ತಪಾಸಣೆ ನಡೆಸಿ, ಪೌಷ್ಟಿಕ ಆಹಾರ ಒದಗಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಈ ವೇಳೆ, ಸಭೆಯಲ್ಲಿದ್ದ ಹಲವರು, ನಿವೇಶನ ಹಂಚಿಕೆ, ಸ್ಮಶಾನ, ಶಾಲೆಗಳಲ್ಲಿ ಆಟದ ಮೈದಾನ ಸಮಸ್ಯೆಗಳ ಕುರಿತು

ಸಭೆಯ ಗಮನಕ್ಕೆ ತಂದರು. ಕೂಡ್ಲಿಗಿ ತಾಲೂಕಿನ ನಿವಾಸಿಯೊಬ್ಬರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿ ನಿಲಯಗಳ ಹತ್ತಿರದಲ್ಲಿ ನಿಯಮಬಾಹಿರವಾಗಿ ವಿಂಡ್ ಫ್ಯಾನ್ ಅಳವಡಿಸಲಾಗಿದೆ. ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗುತ್ತಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್‌. ಜಾಹ್ನವಿ. ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗದ ಕಾರ್ಯದರ್ಶಿ ಡಾ. ಎಚ್.ಎಸ್. ಶಿವರಾಮ್, ಸದಸ್ಯರಾದ ಗೀತಾ ಥಾವಂಶಿ, ಎನ್. ದಿವಾಕರ್, ಸುನೀಲ್ ಎಂ. ಉಕ್ಕಲಿ, ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು. ಎಸ್‌ಸಿ, ಎಸ್‌ಟಿ ಕುಂದುಕೊರತೆಗಳ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ


ಹೊಸಪೇಟೆ: ಅರ್ಹರಲ್ಲದವರು ನಕಲಿ ಜಾತಿ ಪ್ರಮಾಣಪತ್ರ ಪಡೆದು ಉದ್ಯೋಗ ಗಿಟ್ಟಿಸಿಕೊಂಡಿರುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಇಂತಹ 12 ನಕಲಿ ಪ್ರಮಾಣಪತ್ರಗಳನ್ನು ರದ್ದುಪಡಿಸಿ, ಅವರ ಉದ್ಯೋಗವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ ತಿಳಿಸಿದರು.ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಕುಂದು ಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.ಜಿಲ್ಲೆಯ ಕೆಲವು ಪುರಸಭೆಗಳಲ್ಲಿ ಪೌರಕಾರ್ಮಿಕರಿಗೆ 11ರಿಂದ 15 ತಿಂಗಳಾದರೂ ವೇತನ ಪಾವತಿಯಾಗಿಲ್ಲ. ಹೊರಗುತ್ತಿಗೆ ಪೌರಕಾರ್ಮಿಕರಿಗೂ ಕನಿಷ್ಠ ₹15,000ರಿಂದ ₹16,000 ವೇತನವನ್ನು ಯಾವುದೇ ವಿಳಂಬವಿಲ್ಲದೆ ಚಾಚೂ ತಪ್ಪದೆ ಪಾವತಿಸಬೇಕು ಎಂದು ಜಿಲ್ಲಾ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದರು.

ಎಸ್‌ಸಿಪಿ, ಟಿಎಸ್‌ಪಿ ನಿಧಿ ಬಳಕೆಯಲ್ಲಿ ಪಾರದರ್ಶಕತೆ ಇರಬೇಕು. ಯಾವ ವರ್ಷದಲ್ಲಿ, ಯಾವ ಇಲಾಖೆಯಿಂದ, ಎಷ್ಟು ನಿಧಿಯಲ್ಲಿ ಕಾಮಗಾರಿ ನಡೆದಿದೆ ಎಂಬುದನ್ನು ತಿಳಿಸಲು ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು.ಆಯೋಗಕ್ಕೆ ದೂರು ಸಲ್ಲಿಸಲು ಸಾರ್ವಜನಿಕರು ಅಲೆಯುವುದನ್ನು ತಪ್ಪಿಸಲು ಮುಂದಿನ ದಿನಗಳಲ್ಲಿ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ ತರಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ನೆರವಾಗಲು ಪ್ರತಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ, ಅಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುವುದು. ಆ ಬಳಿಕ ನೋಟಿಸ್ ಜಾರಿ ಮಾಡಿ, ಅಗತ್ಯಬಿದ್ದರೆ ದೂರವಾಣಿ ಮೂಲಕ ಕರೆಸಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದರು.

ಆಯೋಗಕ್ಕೆ ಸಲ್ಲಿಕೆಯಾಗಿರುವ ಸುಮಾರು 4,100 ಪ್ರಕರಣಗಳ ಪೈಕಿ ಕಳೆದ ಆರೂವರೆ ತಿಂಗಳಲ್ಲಿ 800ಕ್ಕೂ ಹೆಚ್ಚು ಪ್ರಕರಣಗಳನ್ನು ಕೋರ್ಟ್ ಮುಖಾಂತರ ಪರಿಶೀಲಿಸಿ, 500 ರಿಂದ 600 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ ಎಂದರು.ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗದ ಕಾರ್ಯದರ್ಶಿ ಡಾ. ಎಚ್.ಎಸ್. ಶಿವರಾಮ್, ಸದಸ್ಯರಾದ ಗೀತಾ ಥಾವಂಶಿ, ಎನ್. ದಿವಾಕರ್, ಸುನೀಲ್ ಎಂ. ಉಕ್ಕಲಿ ಉಪಸ್ಥಿತರಿದ್ದರು.