ಸಾರಾಂಶ
ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.ವೇದಬ್ರಹ್ಮ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆಯಲಿವೆ. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣರ ಅಂತ್ಯಕ್ರಿಯೆ ಜರುಗಲಿದೆ.ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸೋಮನಹಳ್ಳಿಗೆ ಆಗಮಿಸಿ, ಸಿದ್ಧತೆಗಳ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿ, ಅಂತ್ಯಕ್ರಿಯೆಗೆ ಗಂಧದ ಕಟ್ಟಿಗೆಗಳ ಬಳಕೆ ಮಾಡಲಾಗುತ್ತಿದೆ. ಬುಧವಾರ ಬೆಳಗ್ಗೆ ಪಾರ್ಥಿವ ಶರೀರ ಸೋಮನಹಳ್ಳಿಗೆ ಬರಲಿದ್ದು, 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.