ಸಾರಾಂಶ
ಹಾವೇರಿ: ದೇಶದ ಆರ್ಥಿಕ ಬೆಳವಣಿಗೆಗೆ ಆಹಾರ ಸಂರಕ್ಷಣೆ ಉದ್ದಿಮೆ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಧಾನಮಂತ್ರಿಗಳ ಕಿರು ಆಹಾರ ಸಂರಕ್ಷಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಬೆಂಗಳೂರು ಕೆಪೆಕ್ ಲಿಮಿಟೆಡ್ ಸಹಯೋಗದಲ್ಲಿ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಹಳ ವರ್ಷಗಳ ಹಿಂದೆ ಬೇರೆ ದೇಶಗಳಿಂದ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ಈಗ ಬೇರೆ ದೇಶಗಳಿಗೆ ಆಹಾರ ರಫ್ತು ಮಾಡುವಷ್ಟು ಭಾರತ ಅಭಿವೃದ್ಧಿ ಹೊಂದಿದೆ. ಭಾರತ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಜಗತ್ತಿನಲ್ಲಿ ಶೇ. 25ರಷ್ಟು ಹಾಲು ಭಾರತ ದೇಶದಲ್ಲಿ ಉತ್ಪಾದನೆಯಾಗುತ್ತದೆ. ಹಣ್ಣು- ತರಕಾರಿ ಉತ್ಪಾದನೆಯಲ್ಲಿ ಭಾರತ ಐದನೇ ಸ್ಥಾನ ಹಾಗೂ ಮಾಂಸ ತಯಾರಿಕೆಯಲ್ಲಿ ಐದನೇ ಸ್ಥಾನದಲ್ಲಿದೆ. ಅದೇ ರೀತಿ ಮಸಾಲೆ ಪದಾರ್ಥ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಆದರೆ ಆಹಾರ ಉತ್ಪಾದನೆಯ ಶೇ. 10ರಷ್ಟು ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ. ಹಾಗಾಗಿ ಆಹಾರ ಉತ್ಪನ್ನಗಳ ಸಂಸ್ಕರಣೆ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು ಎಂದರು.ಆತ್ಮನಿರ್ಭರ ಭಾರತ ಅಭಿಯಾನದಡಿ ಈ ಯೋಜನೆಯನ್ನು 20- 21ರಲ್ಲಿ ಆರಂಭಿಸಿದ್ದು, ಇದು ಐದು ವರ್ಷಗಳ ಯೋಜನೆಯಾಗಿತ್ತು. ಆದರೆ ಸಣ್ಣ ಉದ್ದಿಮೆದಾರರಿಗೆ ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಈ ಯೋಜನೆಯನ್ನು 2026ರ ಮಾರ್ಚ್‌ವರೆಗೆ ವಿಸ್ತರಿಸಲಾಗಿದೆ. ಅಭಿವೃದ್ಧಿ ಹೊಂದಿದ ದೇಶಗಳ ಆರ್ಥಿಕ ಬೆಳವಣಿಗೆ ಮಹಿಳೆಯರ ಪಾತ್ರ ಪ್ರಮುಖವಾಗುತ್ತದೆ. ಹಾವೇರಿ ಕೃಷಿಪ್ರಧಾನ ಜಿಲ್ಲೆ. ಕೃಷಿ ಆರ್ಥಿಕ ಬೆಳೆವಣಿಗೆಗೆ ಬೆನ್ನೆಲುಬಾಗಿದೆ. ಜಿಲ್ಲೆಯಲ್ಲಿ ಸಣ್ಣ ಉದ್ದಿಮೆ ಸ್ಥಾಪನೆಗೆ ವಿಫುಲ ಅವಕಾಶಗಳಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಬೆಳೆಯಬೇಕು ಎಂದರು. ಸಚಿವರ ಸಂದೇಶ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರ ಸಂದೇಶವನ್ನು ಜಂಟಿ ಕೃಷಿ ನಿರ್ದೇಶಕ ಕೆ. ಮಲ್ಲಿಕಾರ್ಜುನ ಅವರು ಓದಿ, ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಪೂರಕವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವ ಉದ್ದೇಶದ ಯೋಜನೆಯ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಿರುವುದು ಸ್ತುತ್ಯಾರ್ಹ ಕಾರ್ಯ.ಈ ಯೋಜನೆಯು ಕಿರು ಆಹಾರ ಸಂಸ್ಕರಣಾ ಉದ್ದಿಮಗಳ ಸ್ಥಾಪನೆಗೆ ಉದ್ದಿಮೆದಾರರು ಮತ್ತು ರೈತರ ಗುಂಪುಗಳಿಗೆ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ಸಂಪರ್ಕಿತ ಸಹಾಯಧನ ಒದಗಿಸುತ್ತಿರುವುದು ಉತ್ತೇಜನ ನೀಡಿದಂತಾಗಲಿದೆ ಎಂದಿದ್ದಾರೆ.
ಬೆಂಗಳೂರು ಕೆಪೆಕ್ ಲಿಮಿಟೆಡ್ ಜಂಟಿ ನಿರ್ದೇಶಕ ಡಾ. ಶಿವಕುಮಾರ ಎಸ್.ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕೆಪೆಕ್ ಸಹಾಯಕ ನಿರ್ದೇಶಕ ಚಂದ್ರಕುಮಾರ ಹಾಗೂ ಜವಾರಿ ಫುಡ್ ಪ್ರೊಡೆಕ್ಟ್‌ನ ಚನ್ನವೀರಯ್ಯ ಹಿರೇಮಠ ಅವರು ಯೋಜನೆಯ ಕುರಿತು ವಿವರವಾದ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಯೋಜನಾ ನಿರ್ದೇಶಕ ಎಚ್.ವೈ. ಮೀಶೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ ಇತರರು ಇದ್ದರು. ವಿಜಯಕುಮಾರ ಕುಕನೂರ ಸ್ವಾಗತಿಸಿದರು.