ಕಾಪು: ಇಲ್ಲಿನ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಜಂಟಿಯಾಗಿ ವಿಶ್ವ ಭೂ ದಿನದ ಅಂಗವಾಗಿ ಭೂ ಸಂರಕ್ಷಣೆ ಕುರಿತು ಉಡುಪಿಯಲ್ಲಿ ಜಾಥಾವನ್ನು ಆಯೋಜಿಸಿತ್ತು. ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ಈ ಜಾಥಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲರು ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ, ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವುದು, ಮಾಲಿನ್ಯವನ್ನು ಕಡಿಮೆ ಮಾಡುವುದು ಮತ್ತು ಪರಿಸರ ಸ್ನೇಹಿ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವದ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ 360ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜಕರಾದ ಸಚಿನ್ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಡಾ. ದೀಪಿಕಾ ಬಿ. ವಿ., ಸಾಂಸ್ಕೃತಿಕ ಘಟಕದ ಸಂಯೋಜಕಿ ಸವಿತಾ ಶೆಣೈ ಉಪಸ್ಥಿತರಿದ್ದರು.