ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿ ನಡೆಯಲಿ: ಡಿಸಿ

| Published : Sep 03 2025, 01:02 AM IST

ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿ ನಡೆಯಲಿ: ಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯವು ವ್ಯವಸ್ಥಿತವಾಗಿ ಯಶಸ್ವಿಗೊಳಿಸಬೇಕು.

ಸಮನ್ವಯ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಪ್ರಶಾಂತ್ ಕುಮಾರ್ ಮಿಶ್ರಾ ನಿರ್ದೇಶನ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯವು ವ್ಯವಸ್ಥಿತವಾಗಿ ಯಶಸ್ವಿಗೊಳಿಸಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಗಾಗಲೇ ಮೊದಲ ಹಂತದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದ್ದು ಯಾವುದೇ ಮನೆಗಳು ತಪ್ಪಿ ಹೋಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕಾಗಿ ವಿವಿಧ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಏರ್ಪಡಿಸಿದ್ದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2ನೇ ಹಂತದಲ್ಲಿ ಸೆ. 22ರಿಂದ ಅ. 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇಂಧನ ಇಲಾಖೆಯಿಂದ ಮನೆಗಳ ಆರ್‌ಆರ್ ನಂಬರ್‌ಗಳಿಗೆ ಜಿಯೋ ಟ್ಯಾಗಿಂಗ್ ಮಾಡುವ ಮೂಲಕ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಜಿಯೋ ಟ್ಯಾಗ್ ಮಾಡಿದ ಮನೆಗಳಿಗೆ ಸ್ಟಿಕರ್ ಅಂಟಿಸಬೇಕು. ಸಮೀಕ್ಷೆ ಕಾರ್ಯಕ್ಕಿಂತ ಮುನ್ನ ಆರ್‌ಆರ್ ನಂಬರ್ ಗುರುತಿಸುವ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 33 ಸಾವಿರ ಮನೆಗಳ ಆರ್‌ಆರ್ ನಂಬರ್ ಸಮೀಕ್ಷೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಯಾವುದೇ ಕುಟುಂಬಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಇದರಿಂದ ಎರಡನೇ ಹಂತದಲ್ಲಿ ನಡೆಯುವ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ಹಾಗೂ ವೈಜ್ಞಾನಿಕ ಮತ್ತು ನಿಖರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗಲಿರುವುದರಿಂದ ಮೊದಲನೇ ಹಂತದ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಅರಿವು ಮೂಡಿಸಿ:

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕಾರ್ಯವನ್ನು 65 ಪ್ರಶ್ನಾವಳಿಯನ್ನೊಳಗೊಂಡ ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ಅಭಿವೃದ್ದಿಪಡಿಸಿರುವ ತಂತ್ರಾಂಶಗಳ ಮೂಲಕ ಸರ್ವೇ ಕಾರ್ಯ ಕೈಗೊಳ್ಳಬೇಕಾಗಿರುತ್ತದೆ. ಹಾಗಾಗಿ ಸಾರ್ವಜನಿಕರಿಗೆ ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಕಸ ವಿಲೇವಾರಿ ವಾಹನಗಳ ಮೂಲಕ ಜಿಂಗಲ್ ಆಡಿಯೋ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಸಮೀಕ್ಷಾ ಕಾರ್ಯಕ್ಕೆ ಸಾರ್ವಜನಿಕರು ಸಹ ಸಹಕರಿಸಬೇಕು ಎಂದು ತಿಳಿಸಿದರು.

ಸಂಡೂರು ತಾಲೂಕು ವ್ಯಾಪ್ತಿಯ ಜಿಂದಾಲ್ ಟೌನ್ ಶಿಪ್ ವ್ಯಾಪ್ತಿಯ ಮನೆಗಳಿಗೆ ಆರ್‌ಆರ್ ನಂಬರ್ ನೀಡಿರುವುದಿಲ್ಲ. ಆ ವ್ಯಾಪ್ತಿಯ ಗ್ರಾಪಂ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸಮೀಕ್ಷೆ ನಡೆಸಿ ಆರ್‌ಆರ್ ನಂಬರ್ ಇಲ್ಲದ ಮನೆಗಳಿಗೆ ನಂಬರ್ ನೀಡಬೇಕು ಎಂದು ಸಂಡೂರಿನ ತಹಶೀಲ್ದಾರ, ಇಒಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಈ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯಬೇಕು. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕಾರ್ಯ ಮಹತ್ವದ್ದಾಗಿರುವುದರಿಂದ ಜಿಲ್ಲೆಯಲ್ಲಿ 4 ಲಕ್ಷ ಕುಟುಂಬಗಳು ಇರುವುದಾಗಿ ಅಂದಾಜಿಸಲಾಗಿದೆ. ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು ಪ್ರತಿ ಕುಟುಂಬಕ್ಕೆ 150 ಕುಟುಂಬಕ್ಕೆ ಒಬ್ಬ ಗಣತಿದಾರರಂತೆ 2000 ಕ್ಕೂ ಹೆಚ್ಚು ಗಣತಿದಾರರು ಮತ್ತು ಪ್ರತಿ 20 ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ಮತ್ತು ಜಿಲ್ಲೆಗೆ 50 ಮಾಸ್ಟರ್ ಟ್ರೈನರ್‌ಗಳನ್ನು ಗುರುತಿಸಿ ನಿಗದಿಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ತರಬೇತಿಗಳಿಗೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಿಆರ್‌ಪಿ, ಬಿಆರ್‌ಪಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಜೆಸ್ಕಾಂ, ಇಂಧನ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಈ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಜಿಲ್ಲಾ ಅಂಕಿ-ಸಂಖ್ಯೆ ಸಂಗ್ರಹಣಾಧಿಕಾರಿ ಪತ್ರಿಬಸಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ತಾಲೂಕುಗಳ ತಹಶೀಲ್ದಾರರು, ಇಒಗಳು, ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.