ಶಿಕ್ಷಣದಿಂದ ಸಾಮಾಜಿಕ ಬದಲಾವಣೆ ಸಾಧ್ಯ

| Published : Feb 06 2024, 01:31 AM IST

ಸಾರಾಂಶ

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯಲು ಹಾಗೂ ಪ್ರಬುದ್ಧತೆಯನ್ನು ಕಾಣಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಾಂತರಾಜು ಹೇಳಿದರು.

ಪ್ರಾಂಶುಪಾಲ ಶಾಂತರಾಜು ಅಭಿಮತ । ಗಮನ ಸೆಳೆದ ಪುಸ್ತಕ ಜೋಳಿಗೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯಲು ಹಾಗೂ ಪ್ರಬುದ್ಧತೆಯನ್ನು ಕಾಣಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಾಂತರಾಜು ಹೇಳಿದರು.

ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಪಂ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಣ ಎಂಬುದು ಹುಲಿಯ ಹಾಲಿನಂತೆ. ಅದನ್ನು ಕುಡಿದವರು ಘರ್ಜಿಸಲೇಬೇಕು ಎಂಬ ಅಂಬೇಡ್ಕರ್ ವಾಣಿಯಂತೆ ಶಿಕ್ಷಣ ಮಹತ್ವದ ಬಗ್ಗೆ ನಿಮ್ಮ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು. ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತಿರುವ ಸವಿನೆನಪಿಗಾಗಿ ಪಿ.ಜಿ. ಪಾಳ್ಯ ಗ್ರಾಪಂಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರದ ಜೊತೆಗೆ ವಿನೂತನವಾಗಿ ಪುಸ್ತಕ ಜೋಳಿಗೆ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಮಕ್ಕಳಲ್ಲಿ ಓದುವ ಅಭಿರುಚಿಯನ್ನು ಬೆಳಸಬೇಕು ಎಂದು ಹೇಳಿದರು.

ಸಂವಿಧಾನವು ನೀಡಿರುವ ಹಕ್ಕುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಪ್ರಬುದ್ಧ ಭಾರತ ನಿರ್ಮಾಣ ಮಾಡುವ ಜೊತೆಗೆ ಅಸಹಾಯಕ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸವನ್ನು ಮಾಡಬೇಕು ಎಂದು ಶಾಂತರಾಜು ಸಲಹೆ ನೀಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಸಂತೋಷಕುಮಾರ್ ಚಾಲನೆ ನೀಡಿದರು.

ಕಳಶ ಹಿಡಿದು, ಪೂರ್ಣಕುಂಭ ಹೊತ್ತ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಜಾಥಾದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಸಂವಿಧಾನ ರಚನಾ ಸಭೆಯ ಕುರಿತ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ವಿಶೇಷವಾಗಿ ರಾಜ್ಯದಲ್ಲಿಯೇ ವಿನೂತನವಾಗಿ ಪುಸ್ತಕ ಜೋಳಿಗೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಏರ್ಪಡಿಸಲಾಗಿದ್ದು, ಇಂದು ಗ್ರಾಮದಲ್ಲಿ ಸುಮಾರು 40 ಪುಸ್ತಕಗಳು ಸಂಗ್ರಹವಾದವು. ಸಾರ್ಜನಿಕರಿಂದ ಸಂಗ್ರಹವಾದ ಪುಸ್ತಕವನ್ನು ಗ್ರಂಥಾಲಯಕ್ಕೆ ನೀಡಲಾಯಿತು.ಸಂವಿಧಾನ ಜಾಗೃತಿ ಜಾಥಾ ನೋಡಲ್ ಅಧಿಕಾರಿ ಸುರೇಶ, ಪಿಡಿಒ ನಂಜುಂಡಸ್ವಾಮಿ, ಉಪಾಧ್ಯಕ್ಷ ಸುನೀತಾ, ಶಿಕ್ಷಕರು, ಗ್ರಾಪಂ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.