ಕನ್ನಡಪ್ರಭ ವಾರ್ತೆ ರಾಯಚೂರು

ಜಿಲ್ಲೆಯಲ್ಲಿ ಈ ಹಿಂದೆಯೇ ಜಿಲ್ಲಾ ಪೊಲೀಸ್ ಅಧೀಕ್ಷಕನಾಗಿ ಸೇವೆ ಸಲ್ಲಿಸಿದ್ದು, ಜಿಲ್ಲೆಯ ಸ್ಥಿತಿ ತಿಳಿದಿದ್ದು, ಪರಿಶಿಷ್ಟ ಜಾತಿ, ಪಂಗಡಗಳಿಗೆ ನ್ಯಾಯ ಒದಗಿಸಲು ಅವರ ಸಮಸ್ಯೆಗಳನ್ನು ಆಲಿಸಲು ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿಯೂ ಸಾಮಾಜಿಕ ನ್ಯಾಯ ಸಭೆಗಳನ್ನು ಮಾಡಲಾಗುವುದು. ಪ್ರಥಮ ಸಭೆ ರಾಯಚೂರು ಜಿಲ್ಲೆಯಿಂದ ಆರಂಭಿಸಲಾಗುತ್ತಿದೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೆಶನಾಲಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪಿ.ಹರಿಶೇಖರನ್ ಹೇಳಿದರು.

ಸ್ಥಳೀಯ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ ರಾಮ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ. ಪೊಲೀಸ್ ಇಲಾಖೆ. ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆ ಹಾಗೂ ಸಮಾಜ ಕಲ್ಯಾಣ ಇಲಾಖೆವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಾಮಾಜಿಕ ನ್ಯಾಯ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು.

ಬೆಂಗಳೂರಿನಿಂದ ರಾಯಚೂರಿಗೆ ಆಗಮಿಸಿರುವ ಮೂಲ ಉದ್ದೇಶವೇ ಪರಿಶಿಷ್ಟ ಜಾತಿ, ಪಂಗಡಗಳ ಜನರಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸು ವುದಾಗಿದೆ. ಆದ್ದರಿಂದ ಪ್ರತಿಯೊಬ್ಬರಿಗೂ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶವಿದ್ದು, ಈ ಸಭೆಯಲ್ಲಿ ಹೇಳಿಕೊಳ್ಳುವ ಹಾಗೂ ಲಿಖಿತ ರೂಪದಲ್ಲಿ ನೀಡಲಾಗುವ ಎಲ್ಲಾ ಸಮಸ್ಯೆಗಳಿಗೆ ಇಲಾಖೆಯಿಂದ ಪರಿಹಾರ ಒದಗಿಸಲು ಖುದ್ದಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಜಿಲ್ಲೆಯಲ್ಲಿ ಕೊಲೆ, ಅತ್ಯಾಚಾರ ಸೇರಿ ಸಾಕಷ್ಟು ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಅವುಗಳ ತನಿಖೆ ಆಗುತ್ತಿದೆ ಆದರೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವ ದೃಷ್ಠಿಯಿಂದ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಾಮಾಜಿಕ ನ್ಯಾಯಸಭೆ ಇಂದು ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಸಭೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ಜಿಲ್ಲೆಯಲ್ಲಿ ಅತಿಹೆಚ್ಚು ಪರಿಶಿಷ್ಟ, ಜಾತಿ,ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಯಿದ್ದು, ಇಲ್ಲಿ ಹೆಚ್ಚಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಆ ಪ್ರಕರಣಗಳ ತನಿಖೆ ಮಾಡಲಾಗುತ್ತಿದೆ ಆದರೆ ಹೆಚ್ಚುವರಿ ತನಿಖೆ ಮತ್ತು ನ್ಯಾಯ ಒದಗಿಸಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಾಮಾಜಿಕ ನ್ಯಾಯ ಸಭೆ ನಡೆಸಲಾಗುತ್ತಿದೆ. ಇದಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹಾಪಾತ್ರ ಮಾತನಾಡಿ, ಇಡೀ ಜಗತ್ತಿನಲ್ಲಿ ಸಾಮಾಜಿಕ ಸಮಾನತೆ, ಏಕತೆ, ಕುರಿತು ಮಾತನಾಡುವಾಗ ನಾವು ಫ್ರಂಚ್ ಕ್ರಾಂತಿಯ ಬಗ್ಗೆ ಮಾತನಾಡುತ್ತೇವೆ. ಆದರೆ ಸಾಂಸ್ಕೃತಿಕ ನಾಯಕ ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮಾನತೆಯ ಕುರಿತು ಮಾತನಾಡಿ ದ್ದರು, ಸಾಮಾಜಿಕ ನ್ಯಾಯದ ಕುರಿತು ಈಗಾಗಲೇ ಸಮಿತಿಗಳನ್ನು ಮಾಡಲಾಗಿದೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಈ ಕುರಿತು ಅರಿವು ಮೂಡಿಸಬೇಕು. ಜಾತಿ ಎನ್ನುವ ವಿಚಾರವನ್ನೇ ತೆಗೆದು ಹಾಕಬೇಕಿದೆ ಎಂದರು.

ಈ ಸಂದರ್ಭದಲ್ಲಿ ಡಿಸಿಆರ್‌ಇ ಬಳ್ಳಾರಿ ವಲಯದ ಪೊಲೀಸ್ ಅಧೀಕ್ಷಕ ನವೀನ್, ಕೇಂದ್ರ ವಲಯದ ಪೊಲೀಸ್ ಅಧೀಕ್ಷಕ ಕರಿಬಸನಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

----

ಬಾಕ್ಸ್

ಪುಸ್ತಕಗಳ ಲೋಕಾರ್ಪಣೆ

ಇದೇ ವೇಳೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪಿ. ಹರಿಶೇಖರನ್ ಅವರು ಬರೆದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ, 1989 ಹಾಗೂ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳು,1995 ಎಂಬ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ವಿತರಣೆ ಮಾಡಲಾಯಿತು.

---

03ಕೆಪಿಆರ್‌ಸಿಆರ್‌ 03: ರಾಯಚೂರಿನ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಮ್ ಸಮುದಾಯ ಭವನದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಾಮಾಜಿಕ ನ್ಯಾಯಸಭೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೆಶನಾಲಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೆಶಕ ಪಿ.ಹರಿಶೇಖರನ್ ಮಾತನಾಡಿದರು.