ಕಲ್ಯಾಣ ಕರ್ನಾಟಕ ಭಾಗದ ನಾಯಕ ಸಮುದಾಯವು ನಾಡಿನ ರಕ್ಷಣೆ, ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಮಹತ್ವದ ಕೊಡುಗೆ ನೀಡಿದೆ. ಮಹರ್ಷಿ ವಾಲ್ಮೀಕಿ ಅವರು ಸಮಾಜದ ಸ್ವಾಭಿಮಾನದ ಪ್ರತೀಕವಾಗಿದ್ದು, ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಅಮೂಲ್ಯ ಸಂದೇಶ ನೀಡಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಕನ್ನಡಪ್ರಭ ವಾರ್ತೆ ಸುರಪುರ

ಕಲ್ಯಾಣ ಕರ್ನಾಟಕ ಭಾಗದ ನಾಯಕ ಸಮುದಾಯವು ನಾಡಿನ ರಕ್ಷಣೆ, ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಮಹತ್ವದ ಕೊಡುಗೆ ನೀಡಿದೆ. ಮಹರ್ಷಿ ವಾಲ್ಮೀಕಿ ಅವರು ಸಮಾಜದ ಸ್ವಾಭಿಮಾನದ ಪ್ರತೀಕವಾಗಿದ್ದು, ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಅಮೂಲ್ಯ ಸಂದೇಶ ನೀಡಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ತಾಲೂಕಿನ ಬಂಡೊಳ್ಳಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ಹಾಗೂ ಶೈಕ್ಷಣಿಕ ಸೌಲಭ್ಯಗಳ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆ ವಹಿಸಿ, ಗಣ್ಯರನ್ನು ಸ್ವಾಗತಿಸಿ ಅವರು ಮಾತನಾಡಿದರು.

ಸಮುದಾಯದ ಮಕ್ಕಳು ವಿದ್ಯಾವಂತರಾಗಿ, ಬುದ್ಧಿವಂತರಾಗಿ ರೂಪುಗೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸಲು ಪೋಷಕರು ಅವರೊಂದಿಗೆ ಸಮಯ ಕಳೆಯಬೇಕು. ಶಿಕ್ಷಣದ ಮಹತ್ವ ಅರಿತು ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಶಿಕ್ಷಣವೇ ಜೀವನದಲ್ಲಿ ಬದಲಾವಣೆ ತರುವ ಶಕ್ತಿಯಾಗಿದ್ದು, ಸಮಾಜದ ಏಳಿಗೆಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದೆ ಎಂದು ತಿಳಿಸಿದರು.

ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ವತಿಯಿಂದ 17 ಎಕರೆ 28 ಗುಂಟೆ ಜಮೀನು ಖರೀದಿಸಿ, ಅಲ್ಲಿ ಶಾಖಾ ಮಠ ಸ್ಥಾಪನೆಗೆ ಮುಂದಾಗಿರುವುದು ಈ ಭಾಗದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದರು. ಗುದ್ದಲಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭವನ್ನು ಅಭೂತಪೂರ್ವವಾಗಿ ಯಶ್ವಸಿಗೊಳಿಸಲು ಕಾರಣಿಭೂತರಾದ ರಾಜನಹಳ್ಳಿ ಶ್ರೀ ಪ್ರಸನ್ನಾನಂದ ಮಹಾಸ್ವಾಮೀಜಿ, ಗೋಲಪಲ್ಲಿಯ ವರದನಾದೇಶ್ವರ ಸ್ವಾಮೀಜಿ, ಗುರುಮಠಕಲ್‌ನ ಮಠಾಧೀಶರು, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಸೇರಿದಂತೆ ಗಣ್ಯರು, ಜನಪ್ರತಿನಿಧಿಗಳನ್ನು ಮತ್ತು ಸಮುದಾಯದ ಮುಖಂಡರ ಕೊಡುಗೆಯನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಸ್ಮರಿಸಿದರು.

ತಂದೆಯವರಾದ ದಿ. ರಾಜಾ ವೆಂಕಟಪ್ಪನಾಯಕ ಅವರನ್ನು ಸ್ಮರಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ, ಇಂದಿನ ಕಾರ್ಯಕ್ರಮದಲ್ಲಿ ತಂದೆಯವರ ಉಪಸ್ಥಿತರಿರಬೇಕಿತ್ತು ಎಂಬ ಭಾವನೆಯನ್ನು ವ್ಯಕ್ತಪಡಿಸಿದರು. ಬಂಡೊಳ್ಳಿಯಲ್ಲಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ಸ್ಥಾಪನೆಗೆ ₹೫ ಕೋಟಿ ಅನುದಾನ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಕೃತಜ್ಞತೆ ಸಲ್ಲಿಸಿದರು.

----ಕೋಟ್-1-----

ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಜಗದ್ಗುರು ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ಪ್ರಯತ್ನ ಯಶಸ್ವಿಯಾಗಿದ್ದರೂ, ನ್ಯಾಯಾಲಯದ ತಡೆಯಿಂದ ಅನುಷ್ಠಾನಕ್ಕೆ ಅಡಚಣೆ ಎದುರಾಗಿದೆ. ಈ ವಿಚಾರವಾಗಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಮೀಸಲಾತಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಪಕ್ಷಗಳ ನಾಯಕರು ಒಗ್ಗಟಾಗಿ ಹೋರಾಟ ನಡೆಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ

ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಹೆಚ್ಚಿನ ಶೈಕ್ಷಣಿಕ ಅವಕಾಶ ಕಲ್ಪಿಸುವ ಆಶಯದಿಂದ, ಸಚಿವ ಸತೀಶ ಜಾರಕಿಹೊಳಿ ಅವರ ಸಲಹೆಯಂತೆ ಶಾಖಾ ಮಠ ಸ್ಥಾಪಿಸಲು ಸಂಕಲ್ಪ ಮಾಡಲಾಯಿತು. ಈ ಭಾಗದ ಮಕ್ಕಳಿಗೆ ಶಿಕ್ಷಣ, ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸುರಪುರ ತಾಲೂಕಿನ ಬಂಡೊಳ್ಳಿಯಲ್ಲಿ ಶಾಖಾ ಮಠ ಸ್ಥಾಪನೆಗೆ ಮುಂದಾಗಿದ್ದೇವೆ. ಪರಿಶಿಷ್ಟ ಪಂಗಡದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಸಂವಿಧಾನಬದ್ಧ ಹಕ್ಕುಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ, ಸಂಬಂಧಿತ ವಿಚಾರಗಳನ್ನು ಸಂವಿಧಾನದ ೯ನೇ ಶೆಡ್ಯೂಲ್‌ನಲ್ಲಿ ಸೇರಿಸುವ ಕುರಿತು ಪಕ್ಷಭೇದ ಮರೆತು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠ ಪ್ರಸನ್ನಾನಂದ ಶ್ರೀ ಹೇಳಿದರು.