ಸಾರಾಂಶ
- ಯುವಕರು, ಮಹಿಳೆಯರಿಗೆ ಉದ್ಯೋಗ, ಕೃಷಿ ಸಂಸ್ಕರಣಾ ಘಟಕಕ್ಕೆ ಆದ್ಯತೆ
- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಹರಪನಹಳ್ಳಿ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಮೂಲಕ ಉದ್ಯೋಗಾವಕಾಶ ಕಲ್ಪಿಸಲು ಒತ್ತು ನೀಡುವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು.ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹರಪನಹಳ್ಳಿ ತಾಲೂಕಿನಲ್ಲಿ ಭಾನುವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಎಂ.ಪಿ. ರವೀಂದ್ರರ ಕನಸಿನಂತೆ ಇಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಮೂಲಕ ಸ್ಥಳೀಯ ಯುವಕರಿಗೆ ಇಲ್ಲಿಯೇ ಉದ್ಯೋಗಾವಕಾಶ ಸೃಷ್ಟಿಗೆ ಯತ್ನಿಸುವೆ ಎಂದರು.
ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಿ, ಜೀವನ ನಡೆಸಲು ಅನುವಾಗುವಂತೆ ಗಾರ್ಮೆಂಟ್ಸ್ ಮತ್ತು ಕರಕುಶಲ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಹರಪನಹಳ್ಳಿ ರೈಲ್ವೇ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಈ ಭಾಗದಲ್ಲಿ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಅವುಗಳನ್ನು ಬೆಳೆದ ರೈತರ ಶ್ರಮಕ್ಕೆ ನ್ಯಾಯಯುತ ಬೆಲೆ ಸಿಗಲು ಅನುವಾಗುವಂತೆ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ತಿಳಿಸಿದರು.ಪ್ರವಾಸಿ, ಪುಣ್ಯಕ್ಷೇತ್ರ ಒಳಗೊಂಡಿರುವ ಈ ಭಾಗದ ಬಾಗಳಿ ಮತ್ತು ನೀಲಗುಂದ ಕ್ಷೇತ್ರಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸುವೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ವರವಾಗಿದೆ. ಮುಂದಿನ ದಿನಗಳಲ್ಲಿ ಹರಪನಹಳ್ಳಿ ತಾಲೂಕಿನಲ್ಲೂ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಹೇಳಿದರು.
ಶಾಸಕ ಎಂ.ಪಿ. ಲತಾ ಮಲ್ಲಿಕಾರ್ಜುನ ಮಾತನಾಡಿ, ಹರಪನಹಳ್ಳಿ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಸಿಕ್ಕಿಲ್ಲ. ಈ ಬಗ್ಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಕೆ.ಕುಬೇರಪ್ಪ, ಮಲ್ಲಿಕಾರ್ಜುನ ಸ್ವಾಮಿ, ಎಲ್.ಎಂ. ನಾಯ್ಕ, ಹಾಲೇಶ್ ಗೌಡ, ಸುಷ್ಮಾ ಪಾಟೀಲ್, ಎಲ್.ಎಂ.ಹನುಮಂತಪ್ಪ, ಮಂಜಪ್ಪ ಹಲಗೇರಿ ಇತರರಿದ್ದರು.
- - - -14ಕೆಡಿವಿಜಿ11, 12:ಹರಪನಹಳ್ಳಿ ತಾಲೂಕಿನ ವಿವಿಧೆಡೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚಿಸಿದರು.