ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಘನತ್ಯಾಜ್ಯ ನಿರ್ವಹಣೆಯಲ್ಲಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸೂಚಿಸಿದ್ದಾರೆ.ಘನತ್ಯಾಜ್ಯ ನಿರ್ವಹಣಾ ನಿಯಮಗಳು 2026ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಮನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ಹಳೆಯ ತ್ಯಾಜ್ಯವಾಗಿ ಮಾರ್ಪಟ್ಟು ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ ಮನೆ ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ ನಾಲ್ಕು ರೀತಿ ವಿಂಗಡಣೆ ಜಾರಿಗೆ ತರಬೇಕು ಎಂದರು.
ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕೆಂದು ಹೇಳಿದರು.ಈಗಾಗಲೇ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ವಾಹಿನಿಗಳ ಮೂಲಕ ಕಸ ವಿಲೇವಾರಿ ನಿರ್ವಹಿಸಲಾಗುತ್ತಿದೆ. ಕಸ ವಿಲೇವಾರಿ ಮಾಡುವವರಿಗೆ ಘನತ್ಯಾಜ್ಯ ನಿರ್ವಹಣೆ ನಿಯಮಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಎಲ್ಲ ಬೃಹತ್ ಪ್ರಮಾಣ ದ ತ್ಯಾಜ್ಯ ಉತ್ಪಾದಕರನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು. ಅವರು ಎಷ್ಟು ತ್ಯಾಜ್ಯ ಸಂಗ್ರಹಣೆ ಹಾಗೂ ಸಂಸ್ಕರಣೆ ಮಾಡುತ್ತಿದ್ದಾರೆ. ಎಷ್ಟು ಬಾಕಿ ಉಳಿದಿದೆ ಎಂಬ ಬಗ್ಗೆ ಸ್ಪಷ್ಟ ತಿಳುವಳಿಕೆ ನೀಡಬೇಕು. ಹೆಚ್ಚು ತ್ಯಾಜ್ಯ ಉತ್ಪತ್ತಿ ಯಾಗುವ ಸ್ಥಳಗಳಲ್ಲಿ ವೈಜ್ಞಾನಿಕ ಕಸ ವಿಂಗಡಣೆಗೆ ಆದ್ಯತೆ ನೀಡಬೇಕು ಎಂದರು.ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ಬಯೋಮೆಡಿಕಲ್ ತ್ಯಾಜ್ಯವನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪಾನಲ್ ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.ಪರಿಸರಕ್ಕೆ ಮಾರಕವಾದ ವಸ್ತುಗಳ ಬಳಕೆ ಕಡಿಮೆ ಮಾಡಲು ಪರ್ಯಾಯ ಹಸಿರು ಉತ್ಪನ್ನ ಉತ್ಪಾದಿಸುವ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಮಾರುಕಟ್ಟೆಯಲ್ಲಿ ಪರಿಸರ ಸ್ನೇಹಿ ಉತ್ಪನ್ನಗಳು ಸುಲಭವಾಗಿ ದೊರೆಯುವಂತೆ ಮಾಡಬೇಕು ಎಂದ ಅವರು, ಈ ಕುರಿತು ಸಾರ್ವಜನಿಕ ಜಾಗೃತಿ ಮತ್ತು ಶಾಲಾ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.ಘನತ್ಯಾಜ್ಯ ನಿರ್ವಹಣಾ ನಿಯಮಗಳ ಅನುಸಾರ ಕಾರ್ಯ ನಿರ್ವಹಿಸುವ ಸಲುವಾಗಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಡನೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಕ್ತ ಸಹಕಾರ ನೀಡಲು ಸೂಚಿಸಿದರು.ಎಂ.ಆರ್.ಎಫ್ ಘಟಕಗಳ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026 ರ ಪರಿಣಾಮಕಾರಿ ಅನುಷ್ಠಾನದ ಕುರಿತು ಅಗತ್ಯ ತರಬೇತಿ ನೀಡಬೇಕು. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳು ತಮ್ಮ ಸುತ್ತಮುತ್ತಲಿನ ಘನತ್ಯಾಜ್ಯ ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಪ್ರವಾಸೋ ದ್ಯಮ ಇಲಾಖೆ ಜಿಲ್ಲೆಯ ಪ್ರವಾಸಿ ಹಾಗೂ ಪ್ರೇಕ್ಷಣೀಯ ಸ್ಥಳಗಳಲ್ಲಿ ಘನತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗೌರವ ಕುಮಾರ್ ಶೆಟ್ಟಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲ್ ಜಾಧವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜು, ಅಜ್ಜಂಪುರ ತಹಸೀಲ್ದಾರ್ ವಿನಾಯಕ ಸಾಗರ್, ಕಡೂರು ತಹಸೀಲ್ದಾರ್ ಪೂರ್ಣಿಮಾ ಇದ್ದರು.