ಸಾರಾಂಶ
ಕನ್ನಡಪ್ರಭ ವಾರ್ತೆ ಬೈಂದೂರುಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯೆಗಳಾಗುತ್ತಿದ್ದಲ್ಲಿ ಯಾವುದೇ ಕಾಲಮಿತಿಯಿಲ್ಲದೆ ತುರ್ತಾಗಿ ಸಮಸ್ಯೆ ನಿವಾರಣೆಗೆ ಗಮನ ಹರಿಸಬೇಕು. ಮಳೆಗಾಲದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಮಳೆಗಾಲ ಮೊದಲೇ ಬಗೆಹರಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅವರು ಸೋಮವಾರ ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯಿತಿಗಳಲ್ಲಿ ಹೆದ್ದಾರಿ ಬದಿಯಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲದಿದ್ದಲ್ಲಿ ವಿಪರೀತ ಮಳೆಯಾಗುವ ಸಂದರ್ಭ ಕೃತಕ ನೆರೆ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಪೈಪ್ ಲೈನ್ ಅಳವಡಿಕೆ ಹಾಗೂ ಕುಡಿಯುವ ನೀರಿನ ವಿತರಣಾ ಜಾಲಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿಗಳು ನಡೆಯುತ್ತಿದ್ದು, ಹೆದ್ದಾರಿ ಪಕ್ಕ ಅಳವಡಿಸಲಾಗಿರುವ ಕುಡಿಯುವ ನೀರಿನ ಪೈಪ್ ಲೈನ್‌ಗಳಿಗೆ ತೊಂದರೆ ಆಗದಂತೆ ಕಾಮಗಾರಿಗಳನ್ನು ನಡೆಸಲು ಹೆದ್ದಾರಿ ಪ್ರಾಧಿಕಾರವು ಅಗತ್ಯ ಗಮನ ಹರಿಸಬೇಕು. ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳು ನಿಯಮಿತವಾಗಿ ಉರಿಯುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬರುತ್ತಿದ್ದು, ಹಾಗಾಗಿ ಹೆದ್ದಾರಿ ಪ್ರಾಧಿಕಾರವು ಈ ಬಗ್ಗೆ ನಿಗಾ ವಹಿಸಬೇಕು. ಸಾರ್ವಜನಿಕರಿಂದ ದೂರುಗಳು ಶಾಸಕರ ಕಚೇರಿಗೆ ಬರುವವರೆಗೆ ಕಾಯದೇ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ದಾರಿ ದೀಪಗಳು ಯಾವುದೇ ಅಡೆ ತಡೆಗಳಿಲ್ಲದೇ ನಿರಂತರವಾಗಿ ಉರಿಯುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.