ಸಾರಾಂಶ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.ಬೆಂಗಳೂರಿನಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು, ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ, ನಗರದಲ್ಲಿ ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಮಾಡುವ ಬಿಬಿಎಂಪಿಯ ಸಾಮರ್ಥ್ಯ ಸರಿಯಾಗಿಲ್ಲ. ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಅಸಮರ್ಪಕವಾಗಿದೆ ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ವರದಿ ಕೊಟ್ಟಿದೆ. ಹೀಗಿದ್ದರೂ ಎಲ್ಲವೂ ಸರಿ ಇರುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.ಅದನ್ನು ಪರಿಗಣಿಸಿದ ನ್ಯಾಯಪೀಠ, ಕೆಎಸ್‌ಪಿಸಿಬಿ ವರದಿ ಆಧರಿಸಿ ಬಿಬಿಎಂಪಿ ಸುಧಾರಿಸಿಕೊಳ್ಳಬೇಕು ಹಾಗಾಗಿ, ಘನತ್ಯಾಜ್ಯ ವಿಲೇವಾರಿ ಸಾಮರ್ಥ್ಯ ವೃದ್ಧಿಸುವ ಹಾಗೂ ಅಸಮರ್ಪಕ ವಿಲೇವಾರಿ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ನಿರ್ಧಾರ ಕೈಗೊಳ್ಳುವಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.