ಸೋಮವಾರಪೇಟೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ

| Published : Nov 24 2024, 01:45 AM IST

ಸಾರಾಂಶ

ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ಈ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಗೌರವಿಸಿ ಮತದಾರರು ಮತನೀಡಿ ಆಯ್ಕೆ ಮಾಡಿದ್ದಾರೆ ಎಂದು ಪಕ್ಷದ ಪರ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಮಾತನಾಡಿ, ಬಿಜೆಪಿ ಸುಳ್ಳುಗಾರರ ಪಕ್ಷ ಎಂಬುದನ್ನು ಮತದಾರರು ಈ ಮೊದಲೇ ತೀರ್ಮಾನಿಸಿ ಮತ ನೀಡಿದ್ದಾರೆ. ಇನ್ನಾದರೂ ಬಿಜೆಪಿ ನಾಯಕರು ಹಸಿ ಸುಳ್ಳುಗಳನ್ನು ಹೇಳುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಬಿಪಿಎಲ್ ಕಾರ್ಡ್‌ ರದ್ದು ಮಾಡಿರುವುದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿದೆ ಎಂದು ಹಸಿಸುಳ್ಳುಗಳನ್ನು ಹೇಳುತ್ತಾ ಬಿಜೆಪಿ ನಾಯಕರು ತಿರುಗುತ್ತಿದ್ದಾರೆ. ಐದು ಗ್ಯಾರೆಂಟಿ ಯೋಜನೆಗಳನ್ನು ಬಿಟ್ಟಿಭಾಗ್ಯ ಎಂದು ಬಿಜೆಪಿ ನಾಯಕರು ಅವಹೇಳನ ಮಾಡುತ್ತಿದ್ದಾರೆ. ವಿಪರೀತ ಪಾಪದ ಕೆಲಸಗಳನ್ನು ಮಾಡಲು ಹೋಗಬಾರದು ಎಂದು ಕಿವಿಮಾತು ಹೇಳಿದರು.

ಕೆಪಿಸಿಸಿ ಸದಸ್ಯ ಕೆ.ಎ. ಯಾಕೂಬ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ, ಡಿಸಿಸಿ ಕಾರ್ಯದರ್ಶಿ ಎಸ್.ಎಂ. ಡಿಸಿಲ್ವಾ, ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ವಕ್ತಾರ ಅಬ್ದುಲ್ ರಜಾಕ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎನ್. ಬಸವರಾಜ್, ಕಾರ್ಯದರ್ಶಿ ಸುನಿಲ್, ಜಾನಕಿ ವೆಂಕಟೇಶ್ ಇದ್ದರು.