ಸಾರಾಂಶ
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ತಾಲೂಕು ಆಡಳಿತ ಹಾಗೂ ಇಲ್ಲಿನ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 26ರಂದು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅದ್ಧೂರಿಯ ಗಣರಾಜ್ಯೋತ್ಸವ ಆಚರಿಸುವಂತೆ ತೀರ್ಮಾನಿಸಲಾಯಿತು.ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎಸ್.ಎನ್. ನರಗುಂದ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಪ್ರತಿ ಪೂರ್ವಭಾವಿ ಸಭೆಯಲ್ಲೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ತಹಸೀಲ್ದಾರ್ ಎಲ್ಲಾ ಅಧಿಕಾರಿಗಳು ಖಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ತಿಳಿಸಿದರು.26ರಂದು ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಧ್ವಜಾರೋಹಣಕ್ಕೆ ಮೈದಾನ ಸ್ವಚ್ಪತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿ, ಬೆಳಗ್ಗಿನ ಉಪಾಹಾರ, ಕವಾಯತು, ಕುಡಿಯುವ ನೀರು ಮತ್ತಿತರ ವ್ಯವಸ್ಥೆಯ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುವಂತೆ, ಮೈದಾನ ಸ್ವಚ್ಛತೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯವರು ಒಂದು ದಿನ ಮೊದಲೇ ಗಮನ ಹರಿಸಬೇಕೆಂದು ತಿಳಿಸಿದರು.
26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಬ್ಬರು ನಿವೃತ್ತ ಯೋಧರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು ಇದ್ದರು.
ಇಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ:ಸೋಮವಾರಪೇಟೆ: ಇಲ್ಲಿನ ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಸ್ಥಳೀಯ ಸಾಕಮ್ಮನ ಬಂಗಲೆ ಮೈದಾನದಲ್ಲಿ 37ನೇ ವರ್ಷದ ರಾಜ್ಯಮ್ಟಟದ ಕಬಡ್ಡಿ ಪಂದ್ಯಾಟ ಶನಿವಾರ ನಡೆಯಲಿದೆ. ಬೆಳಗ್ಗೆ 11ಕ್ಕೆ ನಡೆಯುವ ಪಂದ್ಯಾಟಕ್ಕೆ ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಚಂದ್ರಮೌಳಿ ಚಾಲನೆ ನೀಡಲಿದ್ದಾರೆ. ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದಾರೆ. ಮುಖ್ಯ ಅತಿಥಿಗಳಾಗಿ ದಲಿತ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಡಿ.ಎಸ್. ನಿರ್ವಾಣಪ್ಪ, ಸಮಾಜಸೇವಕ ಗಿರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಪ್ರಮುಖರಾದ ಎಸ್.ಎಂ. ಡಿಸಿಲ್ವ, ಸತೀಶ್, ಗಂಗಾಧರ್, ಎಚ್.ಎಸ್. ವೆಂಕಪ್ಪ ಮತ್ತಿತರರು ಇರಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.