ಕನ್ನಡಪ್ರಭವಾರ್ತೆ ಸೋಮವಾರಪೇಟೆ

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಾನವ ಕಳ್ಳಸಾಗಣೆ ವಿರುದ್ಧ ವಿಶ್ವ ದಿನಾಚರಣೆ ಅಂಗವಾಗಿ ಮಾದಾಪುರದ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮ ಮಂಗಳವಾರ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕಿ ಎಚ್.ಆರ್. ಪವಿತ್ರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮಾನವ ಕಳ್ಳಸಾಗಣೆ, ಪೋಕ್ಸೋ ಕಾಯ್ದೆ, ಮಾದಕ ದ್ರವ್ಯಗಳ ದುಷ್ಪರಿಣಾಮ, ಲೈಂಗಿಕ ಕಿರುಕುಳ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಬಾಲ್ಯವಿವಾಹ ನಿಷೇಧ ಕುರಿತಂತೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ತಮ್ಮ ಹಕ್ಕುಗಳು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದಿ, ಯಾವುದೇ ಸಮಸ್ಯೆ ಎದುರಾದಾಗ ಧೈರ್ಯದಿಂದ ಕಾನೂನು ನೆರವು ಪಡೆಯುವಂತೆ ಕರೆ ನೀಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಜೆ. ಮಂದಪ್ಪ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಕಾನೂನು ಪಾಲನೆಯೊಂದಿಗೆ ಸುಶಿಕ್ಷಿತ ಮತ್ತು ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯಬೇಕು ಎಂದು ತಿಳಿಸಿದರು. ೪೦೦ ವಿದ್ಯಾರ್ಥಿಗಳು ಭಾಗವಹಿಸಿ ಕಾನೂನು ಅರಿವು ಪಡೆದುಕೊಂಡರು.