ಸೋಮವಾರಪೇಟೆ ತಾಲೂಕು ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

| Published : Jan 24 2025, 12:47 AM IST

ಸೋಮವಾರಪೇಟೆ ತಾಲೂಕು ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಕಾಂತರಾಜ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಕಾಂತರಾಜ್ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ವರದಿ ಓದಿ ಚರ್ಚಿಸುವುದರೊಂದಿಗೆ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎನ್ನುವ ಮಾಹಿತಿ ಪಡೆಯಲಾಯಿತು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಪಡಿತರ ಚೀಟಿಯ ತಿದ್ದುಪಡಿ ಬೇರೆ ಜಿಲ್ಲೆಯಲ್ಲಿ ಈಗಾಗಲೇ ಮುಗಿದಿದೆ. ಆದರೆ, ಕೊಡಗಿನಲ್ಲಿ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಸಮಿತಿ ಸದಸ್ಯರು ಹೇಳಿದರು. ಸೋಮವಾರಪೇಟೆಯಲ್ಲಿ ಕೆಎಸ್‌ಆರ್‌ಟಿಸಿ ಘಟಕ ಪ್ರಾರಂಭಿಸಲು ಸೂಕ್ತ ಜಾಗದ ಅವಶ್ಯಕತೆ ಇದೆ. ಇದು ಕಾರ್ಯರೂಪಕ್ಕೆ ಬಂದರೆ ಬಸ್ ಮಾರ್ಗದ ವ್ಯವಸ್ಥೆ ಸುಧಾರಿಸುವುದರೊಂದಿಗೆ ಸರ್ಕಾರದ ಶಕ್ತಿ ಯೋಜನೆಯ ಮೂಲಕ ಘಟಕಕ್ಕೂ ಆದಾಯ ಬರಲಿದೆ ಎಂದು ಮಡಿಕೇರಿ ಡಿಪೋ ವ್ಯವಸ್ಥಾಪಕ ಮಹಮ್ಮದಾಲಿ ಹೇಳಿದರು.

ಯುವನಿಧಿ ಯೋಜನೆಯ ಕುರಿತು ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತಾಗಬೇಕು. ಗೃಹಲಕ್ಷ್ಮೀ ಯೋಜನೆಯ ಪ್ರಯೋಜನದ ಕುರಿತು ಹಾಡಿಗಳಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕಿದೆ ಎಂದು ಅಧ್ಯಕ್ಷ ಕಾಂತರಾಜ್ ಹೇಳಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳು ಧ್ವನಿಮುದ್ರಣ ಮಾಡಿ ಕಳುಹಿಸಿಕೊಟ್ಟರೆ ಗ್ರಾಮ ಪಂಚಾಯಿತಿಯ ಸ್ವಚ್ಫ ವಾಹಿನಿ ವಾಹನಗಳ ಮೂಲಕ ಪ್ರಚಾರ ಮಾಡಿದರೆ ಇನ್ನಷ್ಟು ಫಲಾನುಭವಿಗಳು ಇದರ ಪ್ರಯೋಜನ ಪಡೆಯಬಹುದು. ಸಂತೆ ಮತ್ತು ಜಾತ್ರೆಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಇರುವ ಭಿತ್ತಿ ಪತ್ರಗಳನ್ನು ಹಂಚುವುದು ಸೂಕ್ತ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ಯೋಜನೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದ್ದರು.