ಸಾರಾಂಶ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಜೆಡಿಎಸ್ ಅಭ್ಯರ್ಥಿ ಜಯಂತಿ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಮೋಹಿನಿ ಅವಿರೋಧ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇಲ್ಲಿನ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಜೆಡಿಎಸ್ ಅಭ್ಯರ್ಥಿ ಜಯಂತಿ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಮೋಹಿನಿ ಅವಿರೋಧ ಆಯ್ಕೆಯಾದರು.ಬುಧವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಜಯಂತಿ ಶಿವಕುಮಾರ್ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೋಹಿನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಣೆ ಮಾಡಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಇದ್ದರು.
ಸಂಸದ ಯದುವೀರ್ ಮಾತನಾಡಿ, ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಆಡಳಿತ ಮುಂದುವರಿದಿರುವುದು ಒಳ್ಳೆಯ ಬೆಳವಣಿಗೆ. ದೇಶದ ಅಭಿವೃದ್ಧಿಯಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸಿದ್ದು, ಮುಂದಿನ ದಿನಗಳಲ್ಲಿ ಇಲ್ಲಿನ ಪಟ್ಟಣ ಪಂಚಾಯಿತಿ ಅಭಿವೃದ್ಧಿ ಕೆಲಸಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು.ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಕಳೆದ ೩೦ವರ್ಷಗಳಿಂದ ಪಟ್ಟಣ ಪಂಚಾಯಿತಿ ಆಡಳಿತವನ್ನು ಬಿಜೆಪಿ ನಡೆಸುತ್ತಿದೆ. ನೂರಾರು ಕೋಟಿ ಹಣವನ್ನು ತಂದು ಅಭಿವೃದ್ಧಿ ಕೆಲಸ ಮಾಡಿದ್ದು, ಮುಂದಿನ ದಿನಗಳಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಮುಂದುವರಿಸಲಾಗುವುದು. ಶಾಸಕರು ಹೆಚ್ಚಿನ ಸಹಕಾರ ನೀಡಬೇಕೆಂದರು.