ಸಾರಾಂಶ
ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಗರದ ಅರಮನೆ ಮೈದಾನಲ್ಲಿ ಆಯೋಜಿಸಿರುವ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ-2024’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.
ಬೆಂಗಳೂರು : ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಗರದ ಅರಮನೆ ಮೈದಾನಲ್ಲಿ ಆಯೋಜಿಸಿರುವ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ-2024’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ ಚಂದ್ರ ಲಹೋಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುತ್ತಾರೆ. ಜೂ.16ರಂದು ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರುಪಾಯಿ ಹೂಡಿಕೆ ನಿರೀಕ್ಷೆ ಹೊಂದಿರುವ ಈ ಮಹತ್ವಾಕಾಂಕ್ಷೆಯ ಉತ್ಸವದಲ್ಲಿ ದಕ್ಷಿಣ ಭಾರತದ ಏಳು ರಾಜ್ಯಗಳ ಪ್ರವಾಸೋದ್ಯಮ ಇಲಾಖೆಯ ಪ್ರತಿನಿಧಿಗಳು, ದೇಶ-ವಿದೇಶಗಳ ಗಣ್ಯರು, ಬಂಡವಾಳ ಹೂಡಿಕೆದಾರರು ಸೇರಿದಂತೆ 1,500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಉತ್ಸವ ನಡೆಯಲಿರುವ ಅರಮನೆ ಮೈದಾನದ ಪ್ರಿನ್ಸಸ್ ಶ್ರೈನ್ ಹಾಲ್‌ಗೆ ಶುಕ್ರವಾರ ಭೇಟಿ ನೀಡಿದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ. ರಾಮ್ ಪ್ರಸಾತ್ ಮನೋಹರ್, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳಲು ಅನುವು ಮಾಡಿಕೊಡುವುದು ಈ ಉತ್ಸವದ ಉದ್ದೇಶವಾಗಿದೆ. ಉತ್ಸವದಲ್ಲಿ 80ಕ್ಕೂ ಹೆಚ್ಚು ಸ್ಟಾಲ್‌ಗಳಿದ್ದು, ಏಳು ರಾಜ್ಯಗಳ ಪ್ರವಾಸೋದ್ಯಮ ಇಲಾಖೆ ಹಾಗೂ ಉದ್ದಿಮೆದಾರರು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಮೂಲಕ ಒಟ್ಟಾಗಿ ಪ್ರವಾಸೋದ್ಯಮ ಕ್ಷೇತ್ರವನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಹೇಳಿದರು.