ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಬಹುತೇಕ ಶಾಂತಿಯುತ ಮತದಾನ

| Published : Jun 04 2024, 12:31 AM IST

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಬಹುತೇಕ ಶಾಂತಿಯುತ ಮತದಾನ
Share this Article
  • FB
  • TW
  • Linkdin
  • Email

ಸಾರಾಂಶ

ಮತಕೇಂದ್ರದ ನೂರು ಮೀಟರ್ ದೂರದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಪೆಂಡಾಲ್ ಹಾಕಿಕೊಂಡು ಮತಗಟ್ಟೆಗೆ ಆಗಮಿಸುವ ಮತದಾರರಿಗೆ ತಮ್ಮ ಅಭ್ಯರ್ಥಿಗಳ ಪರವಾಗಿ ಮತಚಲಾಯಿಸುವಂತೆ ಮನವಿ ಮಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಎರಡು ಪಕ್ಷಗಳ ಅಭ್ಯರ್ಥಿಗಳು ಅಕ್ಕಪಕ್ಕದಲ್ಲಿಯೇ ಇದ್ದರೂ ಯಾವುದೇ ಗಲಾಟೆ ಗದ್ದಲುಗಳು ಉಂಟಾಗದಂತೆ ಶಾಂತಿಯುತವಾಗಿ ಪ್ರಚಾರ ನಡೆಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಸೋಮವಾರ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು.

ತಾಲೂಕಿನಲ್ಲಿ ಒಟ್ಟು 446 ಮತದಾರರಿದ್ದು, 416 (93.04) ಮತಗಳು ಚಲಾವಣೆಗೊಂಡವು. ಪಟ್ಟಣದ ಮಿನಿ ವಿಧಾನಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಮತಗಟ್ಟೆ ಸ್ಥಾಪಿಸಲಾಗಿತ್ತು. ಬೆಳಗ್ಗೆಯಿಂದಲೇ ಶಿಕ್ಷಕರು ಮತಗಟ್ಟೆ ಕೇಂದ್ರಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.

ಮತಕೇಂದ್ರದ ನೂರು ಮೀಟರ್ ದೂರದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಪೆಂಡಾಲ್ ಹಾಕಿಕೊಂಡು ಮತಗಟ್ಟೆಗೆ ಆಗಮಿಸುವ ಮತದಾರರಿಗೆ ತಮ್ಮ ಅಭ್ಯರ್ಥಿಗಳ ಪರವಾಗಿ ಮತಚಲಾಯಿಸುವಂತೆ ಮನವಿ ಮಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಎರಡು ಪಕ್ಷಗಳ ಅಭ್ಯರ್ಥಿಗಳು ಅಕ್ಕಪಕ್ಕದಲ್ಲಿಯೇ ಇದ್ದರೂ ಯಾವುದೇ ಗಲಾಟೆ ಗದ್ದಲುಗಳು ಉಂಟಾಗದಂತೆ ಶಾಂತಿಯುತವಾಗಿ ಪ್ರಚಾರ ನಡೆಸಿದರು. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕನಂದ ಪರ ಜೆಡಿಎಸ್-ಬಿಜೆಪಿ ಪಕ್ಷದ ಕಾರ್‍ಯಕರ್ತರು ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ನೇತೃತ್ವದಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮರೀತಿಬ್ಬೇಗೌಡ ಅವರ ಪರವಾಗಿ ಕಾಂಗ್ರೆಸ್-ರೈತಸಂಘದ ಕಾರ್‍ಯಕರ್ತರು ಕೆಪಿಸಿಸಿ ಪ್ರಧಾನ ಕಾರ್‍ಯದರ್ಶಿ ಎಚ್.ತ್ಯಾಗರಾಜು ಅವರ ನೇತೃತ್ವದಲ್ಲಿ ತಮ್ಮ ಅಭ್ಯರ್ಥಿಗೆ ಮತಹಾಕುವಂತೆ ಮನವಿ ಮಾಡಿದರು.

ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ಮಾತನಾಡಿ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕನಂದ ಅವರ ಪರವಾಗಿ ಕ್ಷೇತ್ರದಲ್ಲಿ ಅಲೆ ಇದೆ. ಅವರ ಗೆಲುವು ಖಚಿತ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಸಹ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಒಂದು ಲಕ್ಷ ಅಧಿಕ ಅಂತರದಿಂದ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಬಿಜೆಪಿ ಅಧ್ಯಕ್ಷ ಧನಂಜಯ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಪಿ.ಚಲುವರಾಜು, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಸಿ.ಯಶ್ವಂತ್‌ ಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕ ರಾಮಕೃಷ್ಣೇಗೌಡ, ಮೈಶುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಗವೀಗೌಡ, ವಿ.ಎಸ್.ನಿಂಗೇಗೌಡ, ಎಸ್‌ಎನ್‌ಟಿ ಸೋಮಶೇಖರ್, ಕೆ.ಎಲ್.ಆನಂದ್, ಡೇರಿರಾಮು, ಸೇರಿದಂತೆ ಜೆಡಿಎಸ್-ಬಿಜೆಪಿ ಮುಖಂಡರು ಇದ್ದರು.

ಎಂಎಲ್‌ಸಿ ದಿನೇಶ್‌ಗೂಳಿಗೌಡ, ಸ್ಟಾರ್‌ಚಂದ್ರು ಭೇಟಿ:

ಮತಗಟ್ಟೆ ಕೇಂದ್ರ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ದಿನೇಶ್‌ ಗೂಳಿಗೌಡ, ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಎಂಎಲ್‌ಸಿ ದಿನೇಶ್‌ಗೂಳಿಗೌಡ ಮಾತನಾಡಿ, ಮರೀತಿಬ್ಬೇಗೌಡರು ಶಿಕ್ಷಕರ ಬೆನ್ನೆಲುಬಾಗಿ ಸದನದ ಒಳಗೆ-ಹೊರಗೆ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. 5ನೇ ಬಾರಿಗೆ ಅವರ ಗೆಲುವು ಖಚಿತ ಎಂದು ವಿಶ್ವಾಸವ್ಯಕ್ತಪಡಿಸಿದರು.

ಸ್ಟಾರ್ ಚಂದ್ರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನು ಗೆದ್ದೆ ಗೆಲ್ಲುತ್ತೇನೆ ಎನ್ನುವ ವಿಶ್ವಾಸವಿದೆ. ಎಕ್ಸಿಟ್ ಪೋಲ್ ಫಲಿತಾಂಶಗಳ ಮೇಲೆ ನನಗೆ ನಂಬಿಕೆ ಇಲ್ಲ. ಮತದಾರರು ತೀರ್ಪು ನೀಡಿದ್ದಾರೆ. ಅದು ಮಂಗಳವಾರ ಹೊರ ಬರಲಿದೆ. ನಾನು ಗೆದ್ದೆ ಗೆಲ್ಲುತ್ತೇನೆ ಎಂದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್‍ಯದರ್ಶಿ ಎಚ್.ತ್ಯಾಗರಾಜು, ಮನ್‌ಮುಲ್ ನಿರ್ದೇಶಕ ಕೆ.ರಾಮಚಂದ್ರು, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ವಿಜೇಂದ್ರಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ರೈತಸಂಘದ ಅಧ್ಯಕ್ಷ ನಾಗರಾಜು, ಕಿಸಾನ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್‍ಯದರ್ಶಿ ಕೆ.ಕುಬೇರ್, ಟಿಎಪಿಸಿಎಂಎಸ್ ನಿರ್ದೇಶಕ ಶ್ರೀಕಾಂತ್, ಕೆನ್ನಾಳು ಗ್ರಾಪಂ ಅಧ್ಯಕ್ಷ ಪ್ರಕಾಶ್, ಬಿ.ಜೆ.ಸ್ವಾಮಿ, ಬಿ.ಟಿ.ಶಿವಣ್ಣ, ಸಿದ್ದಲಿಂಗಯ್ಯ, ಉಮಾಶಂಕರ್, ಡಿ.ಹುಚ್ಚೇಗೌಡ, ಮಹಮದ್ ಹನೀಫ್, ಚಲುವರಸನಕೊಪ್ಪಲು ದರ್ಶನ್ ಸೇರಿದಂತೆ ಅನೇಕ ಕಾಂಗ್ರೆಸ್-ರೈತಸಂಘದ ಮುಖಂಡರು ಇದ್ದರು.