15ರಂದು ಬೆಂಗಳೂರಿಗೆ ಎಸ್‌ಪಿ ವರಿಷ್ಠ ಅಖಿಲೇಶ ಯಾದವ್

| Published : Nov 11 2025, 01:30 AM IST

15ರಂದು ಬೆಂಗಳೂರಿಗೆ ಎಸ್‌ಪಿ ವರಿಷ್ಠ ಅಖಿಲೇಶ ಯಾದವ್
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ ಯಾದವ್ ನ.15ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಎನ್.ರವಿಕುಮಾರ ಹೇಳಿದ್ದಾರೆ.

- 2 ದಿನಗಳ ಭೇಟಿ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸಭೆ, ಸಮಾಲೋಚನೆ: ಕೆ.ಎನ್.ರವಿಕುಮಾರ್‌ ಮಾಹಿತಿ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ ಯಾದವ್ ನ.15ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಎನ್.ರವಿಕುಮಾರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆಯುವ 2 ದಿನಗಳ ಸಭೆಯಲ್ಲಿ ಸಮಾಜವಾದಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ ಜೊತೆಗೆ ಕೆಲ ಅಂಶಗಳ ಬಗ್ಗೆ ಅಖಿಲೇಶ್ ಯಾದವ್ ಸಮಾಲೋಚನೆ ನಡೆಸುವರು ಎಂದರು.

ಕರ್ನಾಟಕ- ಗೋವಾ ರಾಜ್ಯಗಳ ಮಧ್ಯೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮಹದಾಯಿ ನೀರಾವರಿ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ, ಅದನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು. ಬಚಾವಲ್ ಆಯೋಗದ ಎ ಸ್ಕೀಂ ಮತ್ತು ಬಿ ಸ್ಕೀಂನಿಂದಾಗಿ ಕೃಷ್ಣಾ ಮತ್ತು ಕಾವೇರಿ ನದಿ ಪಾತ್ರದಿಂದ ಸುಮಾರು 282 ಟಿಎಂಸಿ ನೀರು ಆಂಧ್ರ ಪ್ರದೇಶ ಮತ್ತು ತಮಿಳುನಾಡಿಗೆ ಹರಿದುಹೋಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯಕ್ಕೆ ಕೃಷಿ ಚಟುವಟಿಕೆ ನಡೆಸಲು ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ ನ್ಯಾಯ ಒದಗಿಸಲೆಂದು ಒತ್ತಾಯಿಸಿದರು.

ಭದ್ರಾ ಮೇಲ್ಡಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಣೆ ಮಾಡಬೇಕು. ಬಜೆಟ್‌ನಲ್ಲಿ ಕೇಂದ್ರವು ₹5 ಸಾವಿರ ಕೋಟಿ ಅನುದಾನ ಘೋಷಿಸಿದ್ದು, ಮೊದಲು ಅನುದಾನ ಬಿಡುಗಡೆ ಮಾಡಲಿ. ಕೇಂದ್ರ ಸರ್ಕಾರಿ ನೌಕರಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದ್ದು, ಯುಪಿಎಸ್‌ಸಿ, ಕೇಂದ್ರ ಸರ್ಕಾರಿ ನೌಕರಿ ಒದಗಿಸುವಾಗ ಕನ್ನಡಿಗರಿಗೆ ಕಡ್ಡಾಯವಾಗಿ ನೌಕರಿ ಒದಗಿಸಬೇಕು. ಸ್ಥಳೀಯ ಸಂಸ್ಥೆ, ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಮಂಗಳಮುಖಿಯರಿಗೆ ಕ್ಷೇತ್ರವಾರು ಮೀಸಲಾತಿ ನೀಡಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವಂತೆ ಸರ್ಕಾರಕ್ಕೆ ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜವಾದಿ ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಮಂಜುನಾಥ, ಜಿಲ್ಲಾಧ್ಯಕ್ಷ ಎಸ್.ಶಿವಾನಂದ, ಶಿವಶಂಕರ ಎಸ್.ಕಳವೂರು ಇತರರು ಇದ್ದರು.

- - -

(ಕೋಟ್‌) ಮುಂಬರುವ ಸ್ಥಳೀಯ ಸಂಸ್ಥೆಗಳು, ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷವು ಸ್ಪರ್ಧಿಸಲು ನಿರ್ಧಾರ ಮಾಡಿದೆ. ಬೂತ್ ಮಟ್ಟದಲ್ಲಿ ಬೇರು ಮಟ್ಟದಿಂದ ಪಕ್ಷ ಸಂಘಟನೆಗೆ ಬಗ್ಗೆಯೂ ಸಭೆಯಲ್ಲಿ ಅಖಿಲೇಶ ಯಾದವ್ ಚರ್ಚೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಹಿಂದುಳಿದ ವರ್ಗ, ದಲಿತರು, ಅಲ್ಪಸಂಖ್ಯಾತರ ಸಂಘಟನೆಗೆ ಪಕ್ಷವು ಯೋಜನೆ ರೂಪಿಸಲಿದ್ದು, ಇದಕ್ಕಾಗಿ ಅಖಿಲೇಶ ಯಾದವ್‌ರ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗುವುದು.

- ಕೆ.ಎನ್.ರವಿಕುಮಾರ, ರಾಜ್ಯ ಕಾರ್ಯದರ್ಶಿ.

- - -

-10ಕೆಡಿವಿಜಿ3:

ದಾವಣಗೆರೆಯಲ್ಲಿ ಸೋಮವಾರ ಸಮಾಜವಾದಿ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಎನ್.ರವಿಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.